ಸೂಕ್ತ ಪರಿಹಾರದ ಭರವಸೆ ನೀಡಿದ ಸಿಎಂ: ಪ್ರತಿಭಟನೆ ಕೈಬಿಟ್ಟ ರೈತರು

Update: 2019-10-10 14:20 GMT

ಬೆಂಗಳೂರು, ಅ.10: ನೆರೆ ಸಂತ್ರಸ್ತರ ಕಷ್ಟಕ್ಕೆ ಧಾವಿಸದ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಕ್ತ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ವಾಪಸ್ಸು ಪಡೆದಿದ್ದಾರೆ.

ಗುರುವಾರ ಸಂಜೆ ನಗರದ ವಿಧಾನಸೌಧದಲ್ಲಿ ರೈತರ ಮುಖಂಡರೊಂದಿಗೆ ಚರ್ಚಿಸಿದ ಬಿ.ಎಸ್.ಯಡಿಯೂರಪ್ಪ ಅವರು, ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದ ಹಿನ್ನೆಲೆ, ಫ್ರೀಡಂ ಪಾರ್ಕ್ ಮೈದಾನದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಈ ಕುರಿತು ‘ವಾರ್ತಾಭಾರತಿ’ ಪತ್ರಿಕೆಯೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಈ ಬಾರಿಯ ಅಧಿವೇಶನವೇ ನೆರೆ ಸಂತ್ರಸ್ತರಿಗಾಗಿ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಯಡಿಯೂರಪ್ಪ ಅವರು ಸಭೆಯಲ್ಲಿ ಭರವಸೆ ನೀಡಿದರು. ಹಾಗಾಗಿ, ಅಹೋರಾತ್ರಿ ಸತ್ಯಾಗ್ರಹ ಕೈಬಿಟ್ಟಿದ್ದೇವೆ ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷದ ಸರಕಾರಗಳೇ ಆಡಳಿತದಲ್ಲಿರುವಾಗ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರೆ ಸಹಿಸಲಾಗುವುದಿಲ್ಲ. ಮುಖ್ಯಮಂತ್ರಿಗಳ ಮಾತನ್ನು ನಂಬಿ, ಪ್ರತಿಭಟನೆ ಕೈಬಿಟ್ಟಿದ್ದೇವೆ. ಒಂದು ವೇಳೆ, ತಮ್ಮ ಬೇಡಿಕೆ ಈಡೇರದಿದ್ದರೆ, ಮತ್ತೇ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಧಾನ ವಿಫಲ: ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ರೈತರ ಪ್ರತಿಭಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಗುರುವಾರ ಮಧ್ಯಾಹ್ನ ಭೇಟಿ ನೀಡಿ ರೈತರೊಂದಿಗೆ ನಡೆಸಿದ ಸಂಧಾನ ವಿಫಲವಾಗಿತ್ತು.

ನೆರೆ ಸಂತ್ರಸ್ತರ ಕಷ್ಟಕ್ಕೆ ಧಾವಿಸದ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಇಲ್ಲಿನ ಫ್ರೀಡಂ ಪಾರ್ಕ್ ಮೈದಾನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಲಕ್ಷ್ಮಣ ಸವದಿ ಭೇಟಿ ನೀಡಿ ಮಾತುಕತೆ ನಡೆಸಿದರು. ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರುವಂತೆ ರೈತರು ಪಟ್ಟು ಹಿಡಿದರು. ಮುಖ್ಯಮಂತ್ರಿ ಬರುವವರೆಗೂ ಪ್ರತಿಭಟನೆ ವಾಪಾಸ್ ಪಡೆಯುವುದಿಲ್ಲ ಎಂದ ರೈತರು, ಲಕ್ಷ್ಮಣ ಸವದಿ ಅವರ ಭರವಸೆಗೂ ಬಗ್ಗದ ರೈತರಿಂದ ಪ್ರತಿಭಟನೆ ಮುಂದುವರೆಸುವ ಎಚ್ಚರಿಕೆ ನೀಡಿದ್ದರು.

ಇದಕ್ಕೂ ಮೊದಲು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಪ್ರತಿಭಟನೆ ನಡೆಸಿದ ರೈತ ಮುಖಂಡರು, ಈಗಾಗಲೇ ರಾಜ್ಯದಲ್ಲಿ ಎದುರಾದ ಪ್ರವಾಹದಿಂದ 4,394 ಗ್ರಾಮಗಳು ಮುಳುಗಡೆಯಾಗಿವೆ. 14,81,473 ಎಕರೆ ಪ್ರದೇಶದಲ್ಲಿ ಬೆಳೆದ ವಿವಿಧ ಬೆಳೆಗಳು ಜಲಾವೃತವಾಗಿವೆ. ಇದರಿಂದ ಸಾಕಷ್ಟು ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ನಿರಂತರವಾಗಿ ಬರಗಾಲ ಮುಂದುವರೆದಿದ್ದರೂ ಶಾಶ್ವತವಾಗಿ ಬರಗಾಲ ಹೋಗಲಾಡಿಸುವಂತ ಯೋಜನೆಗಳನ್ನು ಜಾರಿ ಮಾಡುತ್ತಿಲ್ಲ. ಇಂತಹ ಸಮಯದಲ್ಲಿ ರೈತರ ಮೇಲೆ ಬ್ಯಾಂಕ್, ಫೈನಾನ್ಸ್ ಕಂಪೆನಿಗಳು ಸಿವಿಲ್ ಮತ್ತು ಕ್ರಿಮಿನಲ್ (ಚೆಕ್‌ಬೌನ್ಸ್) ಪ್ರಕರಣ ದಾಖಲಿಸಿ ನೋಟೀಸ್ ನೀಡುತ್ತಿವೆ. ರೈತರು ಬೆಳೆದ ಕೃಷಿ ಉತ್ಪನ್ನಗಳಿಗೂ ಬೆಲೆ ಇಲ್ಲದಂತೆ ಆಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News