ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ: ದಲಿತ ಪರ ಸಂಘಟನೆಗಳಿಂದ ಪ್ರತಿಭಟನೆ

Update: 2019-10-11 18:49 GMT

ತುಮಕೂರು,ಅ.11: ಮಾಜಿ ಡಿಸಿಎಂ ಡಾ.ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜಕೀಯ ಪ್ರೇರಿತವಾಗಿ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ ದಲಿತ ಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ವಕೀಲ ಟಿ.ಆರ್.ನಾಗೇಶ್ ಅವರು, ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಳೆದ ಐದು ದಶಕಗಳಿಂದ ಶಿಕ್ಷಣ ಸೇವೆ ಯನ್ನು ಮಾಡುತ್ತಿದ್ದು, ಬೇರೆ ಉದ್ದಿಮೆಗಳನ್ನು ನಡೆಸದೇ ಇದ್ದರೂ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹುನ್ನಾರ ಮಾಡಿವೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಪ್ರಬಲ ಕಾಂಗ್ರೆಸ್ ನಾಯಕರಾಗಿರುವ ಡಾ.ಜಿ.ಪರಮೇಶ್ವರ್ ಅವರ ತಂದೆ ಗಂಗಾಧರಯ್ಯ ಅವರು ಶಿಕ್ಷಣ ಸಂಸ್ಥೆಗಳ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ್ದು, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಈಗ ರಾಜಕೀಯ ಕಾರಣಗಳಿಂದಾಗಿ ಶಿಕ್ಷಣ ಸಂಸ್ಥೆಯ ಮೇಲೆ ದಾಳಿ ನಡೆಸುತ್ತಿರುವುದು ಸರಿಯಲ್ಲ ಎಂದು ದೂರಿದರು.

ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್ ಮಾತನಾಡಿ, ದಲಿತ ಸಮುದಾಯದ ಅಗ್ರ ನಾಯಕರಲ್ಲಿ ಒಬ್ಬರಾಗಿರುವ ಪರಮೇಶ್ವರ್ ಅವರನ್ನು ಐಟಿ ದಾಳಿ ಮೂಲಕ ತುಳಿಯುವ ಹುನ್ನಾರ ಇದಾಗಿದೆ. ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳು ಅನೇಕ ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೆರವು ನೀಡುತ್ತಿದ್ದು, ಇಂತಹ ಪ್ರಯತ್ನಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಗೋವಿಂದರಾಜು,  ಸಿದ್ಧಲಿಂಗಪ್ಪ, ಜೆ.ಸಿ.ಬಿ ವೆಂಕಟೇಶ್, ದಯಾನಂದ್, ರಾಜೇಶ್ ಸೇರಿದಂತೆ ಇತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News