ಮಂಡ್ಯ: ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Update: 2019-10-11 18:57 GMT

ಮಂಡ್ಯ, ಅ.11: ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಕಾಂಗ್ರೆಸ್ ಮುಖಂಡರ ಶಿಕ್ಷಣ ಸಂಸ್ಥೆ, ನಿವಾಸದ ಮೇಲಿನ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳ ಮತ್ತು ಆ ಪಕ್ಷಗಳ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಐಟಿ ಮತ್ತಿತರ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ಸರಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷದ ಮತ್ತು ಕೆಲವು ಮುಖಂಡರ ಮೇಲೆ ವಿನಾಕಾರಣ ಐಟಿ, ಇಡಿ, ಸಿಬಿಐ ದಾಳಿ ನಡೆಸಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ಅವರು ಕಿಡಿಕಾರಿದರು.

ಡಿ.ಕೆ.ಶಿವಕುಮಾರ್ ನಂತರ, ಡಾ.ಪರಮೇಶ್ವರ್, ಆರ್.ಎಲ್.ಜಾಲಪ್ಪ ಅವರ ನಿವಾಸ ಮತ್ತು ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಅವರು ದೂರಿದರು.

ಬಿಜೆಪಿ ಆಡಳಿತದಲ್ಲಿ ದೇಶದ ಆರ್ಥಿಕತೆ ಕುಸಿದು ಹೋಗುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಗಮನಹರಿಸುತ್ತಿಲ್ಲ. ಬದಲಾಗಿ ವಿಪಕ್ಷಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸೇಡಿನ ರಾಜಕಾರಣ ಬಿಟ್ಟು ದಲಿತರು, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ರೈತ, ಕಾರ್ಮಿಕ, ಜನಸಾಮಾನ್ಯರ ಸಮಸ್ಯೆಗಳನ್ನು ನಿವಾರಿಸಲು ಮುಂದಾಗಬೇಕು ಎಂದು ಅವರು ತಾಕೀತು ಮಾಡಿದರು.

ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್, ಮೈಷುಗರ್ ಮಾಜಿ ಅಧ್ಯಕ್ಷ ರಾಮಲಿಂಗಯ್ಯ, ತಾಪಂ ಸದಸ್ಯ ಪ್ರಶಾಂತ್ ಬಾಬು, ಸಿ.ಎಂ.ದ್ಯಾವಪ್ಪ, ನಗರಸಭೆ ಸದಸ್ಯ ರಾಮಲಿಂಗಯ್ಯ, ವಿಜಯಲಕ್ಷ್ಮಿ ರಘುನಂದನ್, ಸುಂಡಹಳ್ಳಿ ಮಂಜುನಾಥ್, ಬಿ.ಪ್ರಕಾಶ್, ಮಹೇಶ್, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News