ಪರಮೇಶ್ವರ್ ಆಪ್ತ ಸಹಾಯಕನ ಆತ್ಮಹತ್ಯೆಗೆ ಐಟಿ ಅಧಿಕಾರಿಗಳೇ ಹೊಣೆ: ವಿಪಕ್ಷ ನಾಯಕ ಸಿದ್ದರಾಮಯ್ಯ

Update: 2019-10-12 11:24 GMT

ಬೆಂಗಳೂರು, ಅ. 12: ‘ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಕಾರಣ ಎಂದು ಹೇಳಲಾಗುತ್ತಿದ್ದು, ಇದು ನಿಜವಾದರೆ ಐಟಿ ಅಧಿಕಾರಿಗಳೇ ಹೊಣೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಮೇಶ್ ಆತ್ಮಹತ್ಯೆ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ. ಆತ್ಮಹತ್ಯೆಗೂ ಮುನ್ನ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದರು ಎಂದು ತಿಳಿದಿದ್ದೇನೆ. ಅಲ್ಲದೆ, 2-3 ದಿನಗಳಿಂದ ಐಟಿ ಅಧಿಕಾರಿಗಳು ವಿಚಾರಣೆ ಮಾಡುವ ವೇಳೆ ಕಿರುಕುಳ ನೀಡಿದ್ದು, ಈ ಕಿರುಕುಳ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ ಎಂದರು.

ರಮೇಶ್ ಅವರ ಕುಟುಂಬಕ್ಕೆ ಸಾಂತ್ವನವನ್ನು ಹೇಳುತ್ತೇನೆ. ಅವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದ ಅವರು, ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿರುವ ಬಗ್ಗೆ ನಾನು ಯಾವುದೇ ಆಕ್ಷೇಪ ವ್ಯಕ್ತಪಡಿಸುತ್ತಿಲ್ಲ. ಆದರೆ, ರಾಜಕೀಯ ದುರುದ್ದೇಶದಿಂದ ದಾಳಿ ಸರಿಯಲ್ಲ ಎಂದರು.

ಕಾಂಗ್ರೆಸ್ ಪಕ್ಷದ ಮುಖಂಡರನ್ನೇ ಗುರಿಯಾಗಿಟ್ಟುಕೊಂಡು ಐಟಿ ದಾಳಿ ನಡೆಸುತ್ತಿರುವುದು ಸರಿಯಲ್ಲ ಎಂಬುವುದು ನನ್ನ ಅಭಿಪ್ರಾಯ. ಕಾಂಗ್ರೆಸ್ ನಾಯಕರು ಮಾತ್ರ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದಾರಾ? ಬಿಜೆಪಿಯ ಯಾವುದೇ ನಾಯಕರು ಶಿಕ್ಷಣ ಸಂಸ್ಥೆಗಳನ್ನು ಹೊಂದಿಲ್ಲವೇ? ಎಂದು ಪ್ರಶ್ನಿಸಿದರು.

‘ಆದಾಯ ತೆರಿಗೆ ಇಲಾಖೆಯ ಅಮಾನವೀಯ ಕಿರುಕುಳಕ್ಕೆ ಮತ್ತೊಂದು ಬಲಿ. ರಾಜ್ಯದ ಜನ ಬಿಜೆಪಿ ಸರಕಾರವನ್ನು, ಆದಾಯ ತೆರಿಗೆ ಇಲಾಖೆಯನ್ನು ಪ್ರಶ್ನಿಸುತ್ತಿದ್ದಾರೆ ಈ ಸಾವು ನ್ಯಾಯವೇ? ರಮೇಶ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ. ಅವರ ಕುಟುಂಬದವರ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ’

-ಕೆಪಿಸಿಸಿ ಟ್ವೀಟ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News