ಅನರ್ಹ ಶಾಸಕರಿಗೆ ಟಿಕೆಟ್ ಸಿಗುತ್ತೋ, ಇಲ್ಲವೋ ಗೊತ್ತಿಲ್ಲ: ಸಚಿವ ಬಿ.ಶ್ರೀರಾಮುಲು

Update: 2019-10-14 14:44 GMT

ಗದಗ, ಅ. 14: ‘ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡುತ್ತಾರೋ ಇಲ್ಲವೋ, ಅದು ನನಗೆ ಗೊತ್ತಿಲ್ಲ. ಆದರೆ, ಯಾರಿಗೆ ಟಿಕೆಟ್ ನೀಡಿದರೂ ಪಕ್ಷಕ್ಕಾಗಿ ಕೆಲಸ ಮಾಡುವುದು ಅನಿವಾರ್ಯ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶದ ಬಳಿಕ ಸಿಎಂ ಬಿಎಸ್‌ವೈ ನೇತೃತ್ವದ ಬಿಜೆಪಿ ಸರಕಾರ ಪತನವಾಗಲಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಭವಿಷ್ಯ ಹೇಳುವ ರಾಜಕಾರಣಿಗಳಿಗೆ ಏನು ಹೇಳಲು ಆಗುವುದಿಲ್ಲ. ವಿಪಕ್ಷ ನಾಯಕರು ಪಂಚಾಂಗ, ಗಿಳಿಶಾಸ್ತ್ರ, ಭವಿಷ್ಯ ಹೇಳುವ, ಮಂತ್ರ-ತಂತ್ರ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಆದರೆ, ದೇವರ ಇಚ್ಛೆ ಪ್ರಕಾರ ನಮ್ಮ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ಶ್ರೀರಾಮುಲು ಹೇಳಿದರು.

ಗೆಲುವು ನಮ್ಮದೆ: ಹದಿನೈದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದ್ದು, ಜನರ ಮನಸ್ಸು ಮೋದಿ ಹಾಗೂ ಯಡಿಯೂರಪ್ಪನವರ ಮೇಲಿದೆ. ಅಭಿವೃದ್ಧಿ ಪರ ಮುಖ್ಯಮಂತ್ರಿ ಅನ್ನುವುದು ಜನರಿಗೆ ಮನವರಿಕೆಯಾಗಿದೆ. ಕಾಂಗ್ರೆಸ್-ಜೆಡಿಎಸ್ ಏನೇ ಪ್ರಯತ್ನ ಮಾಡಿದರೂ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ನಿಶ್ಚಿತ ಎಂದು ನುಡಿದರು.

ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡಬೇಕೋ ಅಥವಾ ಬೇರೆಯವರಿಗೆ ಟಿಕೆಟ್ ನೀಡಬೇಕೋ ಎಂಬ ಬಗ್ಗೆ ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಮುಖಂಡರು ತೀರ್ಮಾನ ಮಾಡಲಿದ್ದಾರೆ. ಯಾರಿಗೆ ಟಿಕೆಟ್ ನೀಡಿದರೂ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಾಗುವುದು ಎಂದರು.

ದೇವರು ಕರುಣಿಸಿದರೆ ಡಿಸಿಎಂ ಸ್ಥಾನ: ಉಪಮುಖ್ಯಮಂತ್ರಿ ಸ್ಥಾನದ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಪಕ್ಷ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಅದಕ್ಕೆ ನಾನು ಬದ್ಧ. ದೇವರು ಕರುಣಿಸಿದಾಗ ಉಪಮುಖ್ಯಮಂತ್ರಿ ಸ್ಥಾನ ಸಿಗುತ್ತದೆ. ಮುಂದಿನ ದಿನಗಳಲ್ಲಿ ಅವಕಾಶ ದೊರೆಯಬಹುದು ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಚಪಲಕ್ಕೆ ಹೇಳಿಕೆ: ನೆರೆ ಸಂತ್ರಸ್ತರಿಗೆ ರಾಜ್ಯ ಸರಕಾರ ಅಗತ್ಯ ನೆರವು ಕಲ್ಪಿಸಿದೆ. ಆದರೆ, ಎಲ್ಲವನ್ನು ವಿರೋಧಿಸುವ ದೃಷ್ಟಿಯಿಂದ ಟೀಕೆ ಮಾಡುವವರಿಗೆ ಏನು ಹೇಳಲು ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಬಾಯಿ ಚಪಲಕ್ಕೆ ಹೇಳಿಕೆಗಳನ್ನು ನೀಡುತ್ತಿದ್ದು, ಅವರು ಸಿಎಂ ಆಗಬೇಕೆಂದು ಕನಸು ಕಾಣುತ್ತಿದ್ದಾರೆ ಎಂದು ರಾಮುಲು ಟೀಕಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News