ಉಪ ಚುನಾವಣೆ: ಅ.15ರಂದು ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮನ

Update: 2019-10-14 17:15 GMT

ಬೆಂಗಳೂರು, ಅ.14: ಅನರ್ಹ ಶಾಸಕರಿಂದಾಗಿ ತೆರವಾಗಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಾಗಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮಂಗಳವಾರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

15 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 10 ಕ್ಷೇತ್ರಗಳಲ್ಲಾದರೂ ಕಾಂಗ್ರೆಸ್ ಗೆಲುವು ಸಾಧಿಸಬೇಕೆಂಬ ಲೆಕ್ಕಾಚಾರದಲ್ಲಿರುವ ಕೆಪಿಸಿಸಿಗೆ, ಅಗತ್ಯ ಮಾರ್ಗದರ್ಶನ, ಸಲಹೆ ಸೂಚನೆಗಳನ್ನು ನೀಡಲು ವೇಣುಗೋಪಾಲ್ ಆಗಮಿಸುತ್ತಿದ್ದಾರೆ. ಇದೇ ವೇಳೆ ಅವರು ಹಿರಿಯ ಕಾಂಗ್ರೆಸ್ ನಾಯಕರು, ಮುಖಂಡರು, ಮುಂಚೂಣಿ ಘಟಕಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಉಪ ಚುನಾವಣೆಯಲ್ಲಿ ಪಕ್ಷದ ಸಂಘಟನೆ, ಅಭ್ಯರ್ಥಿಗಳ ಆಯ್ಕೆ ವಿಚಾರದ ಕುರಿತು ವೇಣುಗೋಪಾಲ್ ಚರ್ಚೆ ನಡೆಸಲಿದ್ದಾರೆ. ಅಲ್ಲದೇ, ಇತ್ತೀಚೆಗೆ ಡಾ.ಜಿ.ಪರಮೇಶ್ವರ್ ಹಾಗೂ ಆರ್.ಎಲ್.ಜಾಲಪ್ಪ ಅವರ ನಿವಾಸಗಳು, ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆಯ ದಾಳಿಯ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲು ಹಲವಾರು ಕ್ಷೇತ್ರಗಳಲ್ಲಿ ಒಂದಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದು, ಕೆಪಿಸಿಸಿ ಸಿದ್ಧಪಡಿಸಿಕೊಂಡಿರುವ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಕುರಿತು ನಾಳೆ ನಡೆಯಲಿರುವ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News