ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್

Update: 2019-10-15 16:09 GMT

ಬೆಂಗಳೂರು, ಅ.15: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯರನ್ನು ಹೊಸದಿಲ್ಲಿಗೆ ಬರುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆಹ್ವಾನ ನೀಡಿದ್ದಾರೆ.

ಹೊಸದಿಲ್ಲಿಯಲ್ಲಿ ಅ.16ರಂದು ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ರಾಜ್ಯದ ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಅಲ್ಲದೇ, ತಮ್ಮನ್ನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸಲಿದ್ದಾರೆ.

ಈ ವೇಳೆ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಪಕ್ಷ ಸಂಘಟನೆ ಹಾಗೂ ಇತ್ತೀಚೆಗೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಇಂದು ದಿಲ್ಲಿಗೆ ಹೋಗುತ್ತಿದ್ದೇನೆ: ವಿರೋಧ ಪಕ್ಷದ ನಾಯಕನಾದ ಮೇಲೆ ಹೈಕಮಾಂಡ್ ಭೇಟಿ ಮಾಡಿರಲಿಲ್ಲ. ಹೀಗಾಗಿ ಇಂದು ದಿಲ್ಲಿಗೆ ಹೋಗುತ್ತಿದ್ದೇನೆ. ನಾಳೆ ಬೆಳಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆಯನ್ನು ವಿಭಜನೆ ಮಾಡುವ ವಿಚಾರದಲ್ಲಿ ಸಿದ್ದರಾಮಯ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ನೀಡಿರುವ ಹೇಳಿಕೆಗೆ ಖಾರವಾಗಿಯೇ ಪ್ರತಿಕ್ರಿಯಿಸಿದರು.

ವಿಶ್ವನಾಥ್ ಯಾರ್ರೀ? ಅವರೊಬ್ಬ ಅನರ್ಹ ಶಾಸಕ ಅಷ್ಟೇ. ವಿಭಜನೆ ಬಗ್ಗೆ ಒಂದು ತೀರ್ಮಾನ ಮಾಡುತ್ತಾರಾ? ಜಿಲ್ಲೆಯ ವಿಭಜನೆ ಬಗ್ಗೆ ತೀರ್ಮಾನ ಮಾಡಬೇಕಾಗಿರುವುದು ಮುಖ್ಯಮಂತ್ರಿ ಯಡಿಯೂರಪ್ಪ. ವಿಶ್ವನಾಥ್ ನನ್ನನ್ನು ಯಾಕೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರು, ಚಾಮರಾಜನಗರ ಜಿಲ್ಲೆ ವಿಭಜನೆ ಆಗುವಾಗ ವಿಶ್ವನಾಥ್ ಏನು ಮಾತನಾಡಿಲ್ಲ. ನನಗಿಂತ ಮುಂಚಿತವಾಗಿಯೇ ವಿಶ್ವನಾಥ್ ರಾಜಕಾರಣದಲ್ಲಿದ್ದಾರೆ. ಆಗ ಅವರು ಈ ವಿಚಾರವನ್ನು ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ಈಗ ಯಾಕೆ ಆ ವಿಷಯವನ್ನು ಪ್ರಸ್ತಾಪ ಮಾಡುತ್ತಿದ್ದಾರೆ? ಇದೆಲ್ಲ ಉಪ ಚುನಾವಣೆ ಎದುರಿಸುವ ತಂತ್ರವಷ್ಟೇ ಎಂದು ಅವರು ಟೀಕಿಸಿದರು.

ಭೌಗೋಳಿಕವಾಗಿ ಹೆಚ್ಚು ವಿಸ್ತಾರ ಹೊಂದಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಬೇಕು ಅನ್ನುವ ಕೂಗು ಬಹಳ ವರ್ಷಗಳಿಂದ ಇದೆ. ಸರಕಾರ ಹಾಗೂ ಆ ಭಾಗದ ಜನಪ್ರತಿನಿಧಿಗಳನ್ನು ಕರೆದು ಚರ್ಚಿಸಿ ಸರಕಾರ ತೀರ್ಮಾನ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News