ನೀತಿ ಸಂಹಿತೆ ಜಾರಿ ಮುಂದೂಡಿಕೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದಿನೇಶ್ ಗುಂಡೂರಾವ್

Update: 2019-10-15 16:32 GMT

ಬೆಂಗಳೂರು, ಅ.15: ರಾಜ್ಯದ 15 ಕ್ಷೇತ್ರಗಳಲ್ಲಿ ಘೋಷಣೆಯಾಗಿರುವ ಉಪ ಚುನಾವಣೆಯ ನೀತಿ ಸಂಹಿತೆ ಜಾರಿಯನ್ನು ಮುಂದೂಡಿರುವ ಕ್ರಮವನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ. ಆದರೆ, ನೀತಿ ಸಂಹಿತೆಯನ್ನು ನ.11ಕ್ಕೆ ಮುಂದೂಡಲಾಗಿದೆ. ಇದನ್ನು ರದ್ದುಗೊಳಿಸಬೇಕು. ಚುನಾವಣಾ ನೀತಿ ಸಂಹಿತೆಯನ್ನು ಸೆ.17ರಿಂದಲೇ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು ಎಂದು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಉಪ ಚುನಾವಣೆಯ ದಿನಾಂಕವನ್ನು ಗುರುತಿಸಿದ ಬಳಿಕ ರಾಜ್ಯ ಸರಕಾರವು ನಿಗಮ ಮತ್ತು ಮಂಡಳಿಗೆ ನೇಮಕ ಮಾಡಿದೆ. ಈ ನೇಮಕಗಳನ್ನು ರದ್ದುಗೊಳಿಸಬೇಕು ಎಂದು ಕೂಡ ಕೋರಿದ್ದಾರೆ.

ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆ ವೇಳೆಯೇ ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿತ್ತು. ಅದಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದ್ದರಿಂದ ಮರು ದಿನಾಂಕ ನಿಗದಿ ಮಾಡಿತ್ತು.

ನವೆಂಬರ್ 11ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ನ.18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನ.19 ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆದುಕೊಳ್ಳಲು ನ.21 ಕೊನೆಯ ದಿನವಾಗಿದೆ. ಡಿ.5ರಂದು ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News