ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಮಮೂರ್ತಿ ರಾಜೀನಾಮೆ

Update: 2019-10-16 14:20 GMT

ಬೆಂಗಳೂರು, ಅ. 16: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಸಭೆ ಕಾಂಗ್ರೆಸ್ ಸದಸ್ಯ ಕೆ.ಸಿ.ರಾಮಮೂರ್ತಿ ಅವರು ತಮ್ಮ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಬುಧವಾರ ಹೊಸದಿಲ್ಲಿಯಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ದು ಅವರನ್ನು ಖುದ್ದು ಭೇಟಿ ಮಾಡಿದ ರಾಮಮೂರ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಸೇರ್ಪಡೆ ಉದ್ದೇಶದಿಂದ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ನಿವೃತ್ತ ಐಪಿಎಸ್ ಅಧಿಕಾರಿ ರಾಮಮೂರ್ತಿ ಅವರನ್ನು 2016ರಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಿಂದ ರಾಜ್ಯಸಭೆಗೆ ನೇಮಕ ಮಾಡಿತ್ತು. ‘ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗುವ ದೃಷ್ಟಿಯಿಂದ ನಾನು ರಾಜೀನಾಮೆ ನೀಡಿದ್ದೇನೆ’ ಎಂದು ರಾಮಮೂರ್ತಿ ಸ್ಪಷ್ಟನೆ ನೀಡಿದ್ದಾರೆ.

‘ರಾಜ್ಯಸಭಾ ಸದಸ್ಯತ್ವ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದೇನೆ. ನನ್ನ ರಾಜೀನಾಮೆ ವಿಚಾರವನ್ನು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರ ಗಮನಕ್ಕೂ ತಂದಿದ್ದೇನೆ. ಇದು ತಕ್ಷಣಕ್ಕೆ ಕೈಗೊಂಡ ತೀರ್ಮಾನವಲ್ಲ’ ಎಂದು ಅವರು ತಿಳಿಸಿದರು.

‘ನನ್ನ ಅನುಭವವನ್ನು ಕಾಂಗ್ರೆಸ್ ಸಮರ್ಪಕವಾಗಿ ಬಳಸಿಕೊಂಡಿಲ್ಲ. ಹೀಗಾಗಿ ಬಿಜೆಪಿ ಸೇರುವ ಬಗ್ಗೆ ನನಗೆ ಒಲವು ಇದೆ. ನನ್ನ ಅನುಭವವನ್ನು ಅವರು ಬಳಸಿಕೊಳ್ಳುವುದಾದರೆ ಮಾತ್ರ ನಾನು ಬಿಜೆಪಿ ಸೇರಲು ಸಿದ್ಧ. ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ ಎಂದರು.

‘ಯಾವುದೇ ಆಮಿಷಗಳಿಗೆ ಬಲಿಯಾಗಿ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ಜತೆಗೆ ಯಾವುದೇ ಬೆದರಿಕೆಗಳು ಕಾರಣವಲ್ಲ. ಬಿಜೆಪಿ ಸೇರುವ ಬಗ್ಗೆ ಇನ್ನೂ ಯಾರೊಂದಿಗೂ ಚರ್ಚಿಸಿಲ್ಲ. ಬಿಜೆಪಿ ಸೇರ್ಪಡೆ ಬಗ್ಗೆ ಈಗಲೇ ಏನು ಹೇಳಲು ಸಾಧ್ಯವಿಲ್ಲ’

-ಕೆ.ಸಿ.ರಾಮಮೂರ್ತಿ ರಾಜ್ಯಸಭಾ ಸದಸ್ಯ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News