ರೈತರ ಸಾಲಮನ್ನಾಕ್ಕೆ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ: ಸಿಎಂ ಯಡಿಯೂರಪ್ಪ

Update: 2019-10-16 11:57 GMT

ಬೆಳಗಾವಿ, ಅ. 16: ‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಘೋಷಿಸಿದ್ದ ರೈತರ ಸಾಲಮನ್ನಾ ದೊಡ್ಡ ಹೊರೆ ನಮ್ಮ ಸರಕಾರದ ಮೇಲಿದೆ. ಹೀಗಿರುವಾಗ ಹೊಸದಾಗಿ ರೈತರ ಸಾಲಮನ್ನಾ ಮಾಡಲು ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಲು ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಮೈತ್ರಿ ಸರಕಾರ ಜಾರಿಗೊಳಿಸಿರುವ ಸಾಲಮನ್ನಾ ಯೋಜನೆ ಅನುಷ್ಠಾನಕ್ಕೆ ತರಲು ಬೇಕಾದ ಪ್ರಯತ್ನ ಮಾಡುತ್ತೇವೆ ಎಂದರು.

ಎಲ್ಲ ಕಾರ್ಯಕ್ರಮಗಳ ಹಣವನ್ನು ನೆರೆ ಪೀಡಿತ ಪ್ರದೇಶಗಳಿಗಾಗಿ ನೀಡುತ್ತಿದ್ದೇವೆ. ಪ್ರವಾಹ ಸಂತ್ರಸ್ತರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ದೊಡ್ಡ ಪ್ರಮಾಣದ ಪರಿಹಾರ ನೀಡುತ್ತಿದ್ದೇವೆ ಎಂದ ಅವರು, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಬೇಕಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ಸಚಿವರು ಉಸ್ತುವಾರಿ: ಹದಿನೈದು ಕ್ಷೇತ್ರಗಳ ಉಪ ಚುನಾವಣೆಯನ್ನು ಗೆಲ್ಲುವ ದೃಷ್ಟಿಯಿಂದ ಒಬ್ಬೊಬ್ಬ ಸಚಿವರಿಗೂ ಒಂದೊಂದು ಕ್ಷೇತ್ರದ ಉಸ್ತುವಾರಿ ನೀಡಲು ಉದ್ದೇಶಿಸಲಾಗಿದೆ. ಉಪಚುನಾವಣೆ ನಮಗೆ ಮಹತ್ವದ್ದು. ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.

ಅನರ್ಹ ಶಾಸಕರ ವಿಷಯದಲ್ಲಿ ಅಪಪ್ರಚಾರಕ್ಕೆ ಯಾರೂ ಕಿವಿಕೊಡುವ ಅಗತ್ಯ ಇಲ್ಲ. ಅ.22ಕ್ಕೆ ಸುಪ್ರೀಂ ಕೋರ್ಟ್ ನೀಡುವ ತೀರ್ಪು ಆಧರಿಸಿ ನಮ್ಮ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸುತ್ತೇವೆ. ತಿಂಗಳಾಂತ್ಯದಿಂದ ಉಪಚುನಾವಣಾ ಪ್ರಚಾರ ಆರಂಭಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ನೀರಾವರಿಗೆ ನಮ್ಮ ಆದ್ಯತೆ. ಮಹದಾಯಿ ಸೇರಿದಂತೆ ಎಲ್ಲ ವಿವಾದವನ್ನೂ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಉಪಚುನಾವಣೆ ಮುಗಿದ ನಂತರ ನೆರೆ-ಹೊರೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

‘ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳಾಂತರಕ್ಕೆ ಸಿದ್ಧವಿರುವ ಗ್ರಾಮಗಳ ಜನರನ್ನು ಎತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡಿ ಪುನರ್ವಸತಿ ಕಲ್ಪಿಸಲು ರಾಜ್ಯ ಸರಕಾರ ಸಿದ್ಧವಿದೆ’

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News