‘ಅಕ್ರಮ ಬಿಪಿಎಲ್ ಕಾರ್ಡ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ’

Update: 2019-10-16 14:17 GMT

ಮಂಗಳೂರು, ಅ.16: ಬಡ ಕುಟುಂಬಗಳಿಗೆ ವಿತರಿಸಲಾಗುತ್ತಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದು, ಸರಕಾರಕ್ಕೆ ವಂಚನೆ ಮಾಡಿರುವವರ ವಿರುದ್ಧ ಕೇಸು ದಾಖಲಿಸುವಂತೆ ರಾಜ್ಯ ಸರಕಾರದ ಕಂದಾಯ ಪ್ರಧಾನ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ದ.ಕ. ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಕಾರ್ಡು ಪಡೆದಿರುವುದು ಅಕ್ಷಮ್ಯ ವಂಚನೆಯಾಗಿದೆ. ಅನರ್ಹರು ಪಡೆದುಕೊಂಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಿಂದಿರುಗಿಸಲು ಈಗಾಗಲೇ ಗಡುವು ನೀಡಲಾಗಿದೆ. ಆದರೂ ಮತ್ತೊಮ್ಮೆ ಅವಕಾಶ ನೀಡಿ ಕೂಡಲೇ ಅನರ್ಹರು ಪಡೆದುಕೊಂಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸಂಬಂಧ ಪಟ್ಟ ಕಚೇರಿಗೆ ಹಿಂದಿರುಗಿಸಬೇಕು. ಹಿಂದಿರುಗಿಸದೇ ಇದ್ದಲ್ಲಿ ಅಂತಹ ಕುಟುಂಬಗಳನ್ನು ಪತ್ತೆ ಮಾಡಿ ನಿರ್ದಾಕ್ಷಿಣ್ಯವಾಗಿ ಐಪಿಸಿ ಸೆಕ್ಷನ್ 420 ಅಡಿ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಿಂಚಣಿದಾರರಿಗೆ ತಾಂತ್ರಿಕ ಸಮಸ್ಯೆಗಳಿಂದ ಪಿಂಚಣಿ ಸರಿಯಾಗಿ ದೊರಕದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಇವುಗಳನ್ನು ತ್ವರಿತವಾಗಿ ಪರಿಹರಿಸಿ ಕ್ಲಪ್ತವಾಗಿ ಪಿಂಚಣಿ ದೊರಕಿಸಿಕೊಡಲು ಮಂಜುನಾಥ್ ಪ್ರಸಾದ್ ತಿಳಿಸಿದರು.

ಪ್ರತಿಯೊಂದು ಗ್ರಾಮದಲ್ಲಿ ರುದ್ರಭೂಮಿ ಕಡ್ಡಾಯವಾಗಿ ಇರಬೇಕು, ಇಲ್ಲದ್ದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಜಾಗವನ್ನು ಗುರುತಿಸಿ ರುದ್ರಭೂಮಿ ನಿರ್ಮಾಣ ಮಾಡುವಂತೆ ಆದೇಶ ನೀಡಿದರು. ಕೃಷಿ ಹಾಗೂ ತೋಟಗಾರಿಕಾ ಬೆಳೆಹಾನಿಗೊಂಡವರಿಗೆ ಸಕಾಲಕ್ಕೆ ವಿಮಾ ಹಣ ದೊರಕದಿರುವ ಬಗ್ಗೆ ವಿಮಾ ಕಂಪೆನಿಗಳ ಅಧಿಕಾರಿಗಳೊಂದಿಗೆ ಕೂಡಲೇ ಚರ್ಚಿಸಲು ಅವರು ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್, ತುಂಬೆ ವೆಂಟೆಡ್ ಡ್ಯಾಂಗೆ ಹೊಂದಿಕೊಂಡ ನದಿ ಬದಿಯಲ್ಲಿ ತಡೆಗೋಡೆ ಇತ್ತೀಚೆಗೆ ಪ್ರವಾಹದಲ್ಲಿ ಕುಸಿದುಬಿದ್ದಿದ್ದು, ಇದರ ಪುನರ್ ನಿರ್ಮಾಣಕ್ಕೆ 8 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ತಿಳಿಸಿದರು.

1,322 ಡೆಂಗ್ ಪ್ರಕರಣ: 2019ರಲ್ಲಿ (ಜನವರಿಯಿಂದ ಸೆಪ್ಟಂಬರ್‌ವರೆಗೆ) ಜಿಲ್ಲೆಯಲ್ಲಿ 1,322 ಡೆಂಗ್ ಪ್ರಕರಣಗಳು ವರದಿಯಾಗಿವೆ. ಅದೇ ರೀತಿ 2,082 ಮಲೇರಿಯ, 150 ಇಲಿಜ್ವರ ಹಾಗೂ 210 ಎಚ್1ಎನ್1- ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಆರ್.ಸೆಲ್ವಮಣಿ, ತರಬೇತಿ ಐಎಎಸ್ ಅಧಿಕಾರಿ ರಾಹುಲ್ ಸಿಂಧ್ಯಾ, ಡಿಸಿಪಿ ಅರುಣಾಂಶು ಗಿರಿ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

‘ಪಚ್ಚನಾಡಿ ಪುನಶ್ಚೇತನಕ್ಕೆ ಒಟ್ಟು 70 ಕೋಟಿ ರೂ. ಅಗತ್ಯ’

ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ತ್ಯಾಜ್ಯ ಕುಸಿತದಿಂದ ಮಂದಾರ ಪ್ರದೇಶದ ಸಂತ್ರಸ್ತರ ಪುನರ್ವಸತಿಗೆ ಸುಮಾರು 20 ಕೋಟಿ ರೂ. ಅಗತ್ಯವಿದೆ. ಅಲ್ಲದೆ, ರಾಜ್ಯ ಸರಕಾರದಿಂದ ನೇಮಕಗೊಂಡ ತಜ್ಞರ ಸಮಿತಿ ಘಟನಾ ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದು, ಬಯೋ ಮೈನಿಂಗ್ ಮೂಲಕ ಅಲ್ಲಿನ ತ್ಯಾಜ್ಯ ಸಮಸ್ಯೆ ಬಗೆಹರಿಸಲು ಸೂಚಿಸಿದೆ. ಇದಕ್ಕಾಗಿ ಅಂದಾಜು 50 ಕೋಟಿ ರೂ. ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದರು.

ಪ್ರವಾಹ ಪುನರ್ವಸತಿ

ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬೆಳ್ತಂಗಡಿ ತಾಲೂಕಿನ ಕೆಲವೆಡೆ ಸಂತ್ರಸ್ತರ ಮನೆ ಪುನರ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ತಕರಾರು ಎತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಸಂತ್ರಸ್ತರ ಬದುಕು ಪುನರ್ ನಿರ್ಮಾಣದಲ್ಲಿ ಸರಕಾರ ನಿರಂತರವಾಗಿ ತೊಡಗಿಸಿದ್ದು, ಈ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಸ್ಪಷ್ಟಪಡಿಸಿದ ಉಸ್ತುವಾರಿ ಕಾರ್ಯದರ್ಶಿ, ನೆರೆ ಹಾವಳಿಯಲ್ಲಿ ಫಲಾನುಭವಿಗಳಿಗೆ ಆದಷ್ಟು ಬೇಗ ಪರಿಹಾರ ದೊರಕುವಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News