ಸಾಮಾಜಿಕ ಪಿಡುಗುಗಳು ಇಂದಿಗೂ ಜೀವಂತ: ಹೈಕೋರ್ಟ್‌ನ ನಿವೃತ್ತ ನ್ಯಾ. ಅರಳಿ ನಾಗರಾಜ್ ವಿಷಾದ

Update: 2019-10-17 18:02 GMT

ಚಿಕ್ಕಮಗಳೂರು, ಅ.17: ದೇಶದಲ್ಲಿ ಸಾಕಷ್ಟು ಸುಧಾರಣೆಗಳಾಗಿದ್ದರೂ ಸಾಮಾಜಿಕ ಪಿಡುಗುಗಳು ಇಂದಿಗೂ ಜೀವಂತವಾಗಿವೆ. ಇವುಗಳ ವಿರುದ್ಧ ಯುವಜನತೆ ಸಂಘಟಿತರಾಗಿ ಹೋರಾಡಬೇಕಿದೆ. ಸದೃಢ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್ ಅಭಿಪ್ರಾಯಿಸಿದ್ದಾರೆ. ನಗರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳು ಕಳೆದರು ಜಾತಿಯತೆ, ಕೋಮುಗಲಭೆ, ಭ್ರಷ್ಟಾಚಾರವು ತಾಂಡವವಾಡುತ್ತಿವೆ. ಇವುಗಳನ್ನು ಹೋಗಲಾಡಿಸುವಲ್ಲಿ ಯುವಕರು ಭವಿಷ್ಯದ ಆಡಳಿತ ಚುಕ್ಕಾಣಿಯನ್ನು ಹಿಡಿಯುವಂತಹ ಸಾಮರ್ಥ್ಯಗಳನ್ನು ಇಂದಿನಿಂದಲೇ ಬೆಳೆಸಿಕೊಂಡು, ಸದೃಢ ರಾಷ್ಟ್ರನಿರ್ಮಾಣ ಮಾಡಲು ಮುಂದಾಗಬೇಕು ಎಂದು ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಯುವಕರು ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಂತಹ ಅವಕಾಶ ಸಿಕ್ಕಾಗ, ಪ್ರಾಮಾಣಿಕತೆ, ಪ್ರಬುದ್ಧತೆ, ನಾಗರಿಕತೆ, ಪ್ರಜ್ಞಾವಂತಿಕೆ ಹಾಗೂ ಪಾರದರ್ಶ ಕತೆಯನ್ನು ಮೈಗೂಡಿಸಿಕೊಂಡು ಅವುಗಳನ್ನು ಆಚರಣೆಗೆ ತರುವಂತಹ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಉತ್ತಮ ಗುರಿಗಳೊಂದಿಗೆ ಸಮಯ ಪ್ರಜ್ಞೆಯನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲ ಸಂಘದ ಕಾರ್ಯದರ್ಶಿ ಬಿ.ಆರ್‌ಜಗದೀಶ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಬಸವರಾಜ ಚೇಂಗಟಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಎಸ್.ಆರ್ ಬಡಿಗೇರ್ ಹಾಗೂ ವಸತಿ ನಿಲಯದ ಮೇಲ್ವಿಚಾರಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News