ರಾಜ್ಯಕ್ಕೆ ಬಾಂಗ್ಲಾ ಮೂಲದ ಉಗ್ರಗಾಮಿಗಳು ನುಸುಳಿದ್ದಾರೆ: ಗೃಹ ಸಚಿವ ಬೊಮ್ಮಾಯಿ

Update: 2019-10-18 16:48 GMT

ಮೈಸೂರು,ಅ.18: ಚುನಾವಣಾ ಪ್ರಚಾರದ ವೇಳೆ ಮಹರಾಷ್ಟ್ರದ ಜನ ನಮ್ಮ ರಾಜ್ಯದ ಮುಖ್ಯಮಂತ್ರಿ ಅವರನ್ನು ಪ್ರಶ್ನೆ ಮಾಡಿದಾಗ ಇಲ್ಲ ಎನ್ನಲಾಗದೆ ನೀರು ಕೊಡುತ್ತೇನೆ ಎಂದು ಹೇಳಿದ್ದಾರಷ್ಟೇ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಗರದ ಪೊಲೀಸ್ ಅಕಾಡೆಮಿಯ ಕವಾಯಿತು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ 42ನೇ ತಂಡದ ಆರಕ್ಷಕ ಉಪರೀಕ್ಷಕರು(ಕೆಎಸ್‍ಐಎಸ್‍ಎಫ್), ಆರ್‍ಎಸ್‍ಐ,(ಸಿಎಆರ್/ಡಿಎಆರ್), ಮತ್ತು ಎಸ್‍ಐ (ಕೆಎಸ್‍ಆರ್‍ಪಿ) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದಲ್ಲಿ ಭಾಗವಹಿ, ಬಹುಮಾನ ವಿತರಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಮಹಾರಾಷ್ಟ್ರದ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾಗ ಅಲ್ಲಿ ನೆರೆದಿದ್ದ ಜನರ ಕೋರಿಕೆಗೆ ಸ್ಪಂದಿಸಿ ಆ ರೀತಿ ಹೇಳಿದ್ದಾರೆ. ಅಲ್ಲದೇ ಅಲ್ಲಿನ ಜನರು ಕುಡಿಯಲು ನೀರು ಕೇಳುತ್ತಿದ್ದಾರೆ. ಕೊಡು ಕೊಳ್ಳುವಿಕೆಯ ಆಧಾರದಲ್ಲಿ ಮಹಾರಾಷ್ಟ್ರ ನೀರು ಕೇಳಿದೆ. ನೀರು ಬಿಡುವ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಅಲ್ಲಿನ ಜನ ಮುಖ್ಯಮಂತ್ರಿಗಳನ್ನು ಪ್ರಶ್ನೆ ಮಾಡಿದಾಗ ಇಲ್ಲ ಎನ್ನಲಾಗದೆ ಸಿಎಂ ಹಾಗೆ ಉತ್ತರಿಸಿದ್ದಾರೆ ಅಷ್ಟೇ ಎಂದು ಹೇಳಿದರು. ಮಹಾರಾಷ್ಟ್ರ ಕರ್ನಾಟಕದ ನಡುವೆ ಕೊಡು ಕೊಳ್ಳುವಿಕೆ ಬಹಳ ಕಾಲದಿಂದಲೂ ಮುಂದುವರೆಸಿಕೊಂಡು ಬಂದಿದೆ ಎಂದು ನುಡಿದರು.

ರಾಜ್ಯಕ್ಕೆ ಬಾಂಗ್ಲಾ ಮೂಲದ ಉಗ್ರಗಾಮಿ ಸಂಘಟನೆ ಸದಸ್ಯರು ನುಸುಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಾಜ್ಯಕ್ಕೆ ನುಸುಳಿರುವ ಬಾಂಗ್ಲಾ ಮುಜಾಹಿದೀನ್ ಸಂಘಟನೆಯ ಉಗ್ರರನ್ನು ಸದೆಬಡಿಯಲು ರಾಜ್ಯ ಪೊಲೀಸ್ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.

ಜಮ್ಮು ಕಾಶ್ಮೀರ ಹಾಗೂ ಬಾಂಗ್ಲಾದೇಶದ ಗಡಿ ಮೂಲಕ ಉಗ್ರರು ದೇಶವನ್ನು ಪ್ರವೇಶಿಸಿದ್ದಾರೆ. ಬಾಂಗ್ಲಾ ದೇಶದವರು ಹೆಚ್ಚಾಗಿ ರಾಜ್ಯಕ್ಕೆ ಪ್ರವೇಶ  ಮಾಡಿದ್ದಾರೆಂದು ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಉಗ್ರರು ಸಕ್ರಿಯರಾಗಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡಲಾಗಿದೆ. ಬಾಂಗ್ಲಾ ಮೂಲದ ಉಗ್ರರು ಹೆಚ್ಚಾಗಿ ನಮ್ಮ ರಾಜ್ಯಕ್ಕೆ ನುಸುಳುವ ಕೆಲಸ ಮಾಡ್ತಿದ್ದಾರೆ. ಅತ್ಯಂತ ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಅಂತಹ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಆ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ವದಂತಿಗಳಿಗೆ ರಾಜ್ಯದ ಜನತೆ ಕಿವಿಗೊಡುವ ಅಗತ್ಯವಿಲ್ಲ ಎಂದರು.

ಬೆಂಗಳೂರಿನ 20 ಕ್ಕೂ ಹೆಚ್ಚು ಸ್ಥಳಗಳಲ್ಲಿ ಉಗ್ರರ ಅಡಗುದಾಣಗಳು ಪತ್ತೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ  ಪಡಿಸಲು ಸಾಧ್ಯವಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಕೆಲವೊಂದು ಮಾಹಿತಿಗಳನ್ನು ತಿಳಿಸಲು ಸಾಧ್ಯವಿಲ್ಲ ಎಂದರು.

ಔರಾದ್ಕರ್ ವರದಿ ಅನುಷ್ಠಾನಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ. ಈ ವರದಿಗೆ ಅಗ್ನಿಶಾಮಕ, ಜೈಲರ್ ಹಾಗೂ ವಿವಿಧ ಇಲಾಖೆಗಳಲ್ಲಿ  ಕಾರ್ಯನಿರ್ವಹಿಸುವ ಪೊಲೀಸರನ್ನು ಸೇರಿಸಲಾಗಿದೆ. ಹೀಗಾಗಿ ಇದನ್ನು ಅಂತಿಮಗೊಳಿಸಲು ಹಣಕಾಸು ವಿಭಾಗಕ್ಕೆ ವರ್ಗಾಯಿಸಲಾಗಿದೆ. ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದ ಬಳಿಕ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಅನುಷ್ಠಾನಕ್ಕೆ ತರಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News