ಪ್ರತಿ ಜಿಲ್ಲೆಯಲ್ಲಿಯೂ ಸೈಬರ್ ಸೆಲ್ ಪ್ರಾರಂಭ: ಸಿಎಂ ಯಡಿಯೂರಪ್ಪ

Update: 2019-10-21 12:44 GMT

ಬೆಂಗಳೂರು, ಅ.21: ಆನ್‌ಲೈನ್ ಅಪರಾಧ ಚಟುವಟಿಕೆ ಹಾಗೂ ಮಾದಕ ವಸ್ತುಗಳ ಮಾರಾಟ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸೈಬರ್ ಸೆಲ್ (ಸಿಇಎನ್) ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಸೋಮವಾರ ನಗರದ ಮೈಸೂರು ರಸ್ತೆಯ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಪೊಲೀಸ್ ಸಂಸ್ಮರಣಾ ದಿನಾಚರಣೆ ಹಿನ್ನೆಲೆ ಹುತಾತ್ಮ ಪೊಲೀಸರ ನೆನಪಿನಲ್ಲಿ ಗೌರವ ವಂದನೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿನ 8 ಡಿಸಿಪಿ ಕಚೇರಿಗಳಲ್ಲಿ ಸೈಬರ್ ಸೆಲ್‌ಗಳ ಸ್ಥಾಪನೆಗೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಸೈಬರ್ ಸೆಲ್‌ಗಳನ್ನು ಸ್ಥಾಪಿಸಿ, ಅಪರಾಧ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗುವುದು ಎಂದರು.

ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ನಗರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಒನ್ ಸ್ಟಾಪ್ ಸರ್ವೀಸ್ ಸೆಂಟರ್ ಆಗಿ ಮೇಲ್ದರ್ಜೆಗೇರಿಸಲು ತುರ್ತು ಕ್ರಮ, ಪ್ರತಿಯೊಂದು ಪೊಲೀಸ್ ಠಾಣೆ ಹಾಗೂ ಕಚೇರಿಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣಕ್ಕೆ 2 ಕೋಟಿ, ಕೆಎಸ್‌ಪಿ ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ತಿಳಿಸಿದರು.

ಪೊಲೀಸರು ಮತ್ತು ಅವರ ಸಿಬ್ಬಂದಿಗೆ ವಸತಿ ಸೌಲಭ್ಯ ನೀಡುವ ವಸತಿ ಗೃಹಗಳ ನಿರ್ಮಾಣ ಯೋಜನೆಯನ್ನು ಮುಂದಿನ ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಶವ ಸಂಸ್ಕಾರಕ್ಕೆ ಈವರೆಗೆ ನೀಡಲಾಗುತ್ತಿದ್ದ 5 ಸಾವಿರ ಬದಲಿಗೆ 10 ಸಾವಿರ ರೂ. ನೀಡಲಿದ್ದು, ಪೊಲೀಸರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಸರಕಾರ ಬದ್ಧ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಯಾವುದೇ ರಾಜ್ಯ, ದೇಶ, ಅಭಿವೃದ್ದಿ ಪಥದಲ್ಲಿ ಸಾಗಬೇಕಾದರೆ ಕಾನೂನು ಸುವ್ಯವಸ್ಥೆ ಉತ್ತಮವಾಗಿರಬೇಕು. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಸಂಘಟಿತ ಅಪರಾಧಿಗಳು, ಸಮಾಜ ವಿರೋಧಿ ಶಕ್ತಿಗಳನ್ನು ನಿಯಂತ್ರಿಸಲು ಪೊಲೀಸರು ಸದಾ ಜಾಗೃತರಾಗಿರಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು, ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ರಜನೀಶ್ ಗೋಯಲ್, ಪಿ.ರವಿಕುಮಾರ್, ಹಿರಿಯ ಅಧಿಕಾರಿಗಳಾದ ಎಂ.ಎನ್.ರೆಡ್ಡಿ, ಐ.ಎಂ.ಪ್ರಸಾದ್, ಪ್ರವೀಣ್ ಸೂದ್, ಕ್ರಿಕೆಟಿಗ ಅನಿಲ್ ಕುಂಬ್ಳೆ, ನಟ ಪುನೀತ್ ರಾಜ್‌ ಕುಮಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News