ಕೆರೆಕಟ್ಟೆಗಳಿಗೆ ನೀರು ತುಂಬಿಸದಿದ್ದರೆ ಪ್ರತಿಭಟನೆ: ಶಾಸಕ ಎಂ.ಶ್ರೀನಿವಾಸ್ ಎಚ್ಚರಿಕೆ

Update: 2019-10-21 18:09 GMT

ಮಂಡ್ಯ, ಅ.21: ತಕ್ಷಣ ಹೇಮಾವತಿ ಜಲಾಶಯದಿಂದ ಬಸರಾಳು ಹೋಬಳಿ ವ್ಯಾಪ್ತಿಯ ಕೆರೆಕಟ್ಟೆಗಳನ್ನು ತುಂಬಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಮುಂದಿನ ಹೋರಾಟ ರೂಪಿಸಲಾಗುವುದು ಎಂದು ಶಾಸಕ ಎಂ.ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯ ವಿಧಾನಸಭಾ ಕ್ಷೇತ್ರದ ತಾಲೂಕಿನ ಬಸರಾಳು ಹೇಮಾವತಿ ಪ್ರವಾಸಿ ಮಂದಿರದಲ್ಲಿ ಸೋಮವಾರ ಹೇಮಾವತಿ ಎಡದಂಡೆ ನಾಲೆಯ ಇಂಜಿನಿಯರ್ ಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ಅಧಿಕಾರಿಗಳ ಬೇಜವಾಬ್ಧಾರಿಯಿಂದ ಕೆರೆಕಟ್ಟೆಗಳಿಗೆ ನೀರು ತುಂಬಿಸಿಲ್ಲ ಎಂದರು.

ಮಳೆಯಿಂದ ನದಿಗಳು ತುಂಬಿ ಹರಿಯುತ್ತಿದ್ದರೂ ರಾಜ್ಯದಲ್ಲಿರುವ ಕೆರೆಕಟ್ಟೆಗಳಿಗೆ ನೀರು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದರು.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ತಿಳಿಸಿದಲ್ಲದೆ, ಅಧಿಕಾರಿಗಳ ಬೇಜವಾಬ್ದಾರಿಯ ಬಗ್ಗೆಯೂ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು. 

ಸಹಾಯಕ ಕಾರ್ಯಪಾಲಕ ಅಭಿಯಂತರೆ ಸುಪ್ರಿಯಾ, ಸಹಾಯಕ ಇಂಜಿನಿಯರ್ ಗಳಾದ ಪ್ರಕಾಶ್, ದೀಪಕ್ ರಾಘವೇಂದ್ರ, ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಜಿ.ತಿಮ್ಮೇಗೌಡ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News