ದೀಪಾವಳಿ ನೆಪದಲ್ಲಿ ಕರ್ತವ್ಯದಿಂದ ವಿಮುಖರಾಗದೆ ನೆರೆ ಸಂತ್ರಸ್ತರಿಗೆ ಸ್ಪಂದಿಸಿ: ಬಿಎಸ್‌ವೈ

Update: 2019-10-23 11:56 GMT

ಬೆಂಗಳೂರು, ಅ. 23: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧಿಕಾರಿಗಳು ದೀಪಾವಳಿ ರಜೆಯ ನೆಪ ಹೇಳಿ ಕರ್ತವ್ಯದಿಂದ ವಿಮುಖರಾಗದೆ, ನೆರೆ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಅಧಿಕಾರಿಗಳಿಗೆ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ.

ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫ್‌ರೆನ್ಸ್ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಧಿಕಾರಿಗಳು ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ದುರದೃಷ್ಟವಶಾತ್ ಪ್ರವಾಹದಿಂದ 13 ಮಂದಿ ಮೃತಪಟ್ಟಿದ್ದು, 10,038 ಮನೆಗಳಿಗೆ ಹಾನಿಯಾಗಿದೆ. ಮೃತರ ಕುಟುಂಬಗಳಿಗೆ ಹಾಗೂ ಹಾನಿಗೊಳಗಾದ ಮನೆಗಳಿಗೆ ಕೂಡಲೇ ಪರಿಹಾರ ವಿತರಿಸಲು ಕ್ರಮ ವಹಿಸಬೇಕು ಎಂದು ಯಡಿಯೂರಪ್ಪ ನಿರ್ದೇಶನ ನೀಡಿದರು.

ಪ್ರಸ್ತುತ ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯ ಚುರುಕುಗೊಳಿಸಿ. ಹೆಚ್ಚುವರಿ ನೆರವು ಬೇಕಾದಲ್ಲಿ ಕೂಡಲೇ ಒದಗಿಸಲಾಗುವುದು. ಈಗಾಗಲೇ ಎನ್‌ಡಿಆರ್‌ಎಫ್‌ನ ಆರು ತಂಡಗಳು ಹಾಗೂ ರಾಯಚೂರಿನಲ್ಲಿ ಸೇನೆಯ ತಂಡವೂ ಕಾರ್ಯ ನಿರ್ವಹಿಸುತ್ತಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಸಂತ್ರಸ್ತರಿಗಾಗಿ 28 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕಾಳಜಿ ಕೇಂದ್ರಗಳಲ್ಲಿ ಔಷಧಿ, ವೈದ್ಯಕೀಯ ನೆರವು ಸೇರಿ ಅಗತ್ಯ ಮೂಲಸೌಲಭ್ಯ ಒದಗಿಸಬೇಕು. ಈ ಹಿಂದೆ ಬಂದಿರುವ ದೂರುಗಳನ್ನು ಗಮನದಲ್ಲಿರಿಸಿಕೊಂಡು ಅವುಗಳನ್ನು ಸರಿಪಡಿಸಿ, ವ್ಯವಸ್ಥಿತವಾಗಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಪ್ರವಾಹ ಸಂತ್ರಸ್ತರಿಗೆ ನೆರವು ಕಲ್ಪಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪ್ರತಿ ಪರಿಹಾರ ಕೇಂದ್ರಕ್ಕೆ ನಿಯೋಜಿಸಬೇಕು ಎಂದ ಅವರು, ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಒಟ್ಟು 1,027.54 ಕೋಟಿ ರೂ.ಲಭ್ಯವಿದ್ದು, ಪರಿಹಾರ ಕಾರ್ಯಕ್ಕೆ ಅನುದಾನದ ಕೊರತೆ ಇಲ್ಲ ಎಂದು ಬಿಎಸ್‌ವೈ ಸ್ಪಷ್ಟಪಡಿಸಿದರು.

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿನ ಸಂತ್ರಸ್ತರಿಗೆ ತುರ್ತು ಕಾರ್ಯಕ್ಕೆ ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ, ರಾಜ್ಯ ಸರಕಾರಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸಿದರೆ, ತತ್‌ಕ್ಷಣವೇ ಅಗತ್ಯದಷ್ಟು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಸರಕಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸಿಎಂ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕಂದಾಯ ಇಲಾಖೆ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಅನಿಲ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

‘ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗಿನ ವಿಡಿಯೋ ಸಂವಾದ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪ ತರಾತುರಿಯಲ್ಲಿ ಮುಗಿಸಿದ್ದು, ಪರಿಸ್ಥಿತಿ ನಿಭಾಯಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಸಭೆಯನ್ನು ಮುಂದುವರಿಸಲು ಸಿಎಸ್‌ಗೆ ಸೂಚನೆ ನೀಡಿ ಆತುರವಾಗಿಯೇ ಪಕ್ಷದ ಕಚೇರಿಗೆ ತೆರಳಿದರು’

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News