ಮತದಾರರ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ: ಕುಮಾರಸ್ವಾಮಿ

Update: 2019-10-24 18:29 GMT

ಬೆಂಗಳೂರು, ಅ.24: ಜನ ಸಾಮಾನ್ಯರು ಎದುರಿಸುತ್ತಿರುವ ನೈಜ ಸಮಸ್ಯೆಗಳಿಂದ ವಿಮುಖರನ್ನಾಗಿಸಿ ಚುನಾವಣೆ ಸಂದರ್ಭದಲ್ಲಿ ಇತರ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಅವರನ್ನು ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂಬುದು ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆ ಫಲಿತಾಂಶದಿಂದ ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಗುರುವಾರ ನಗರದ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬರ ಹಾಗೂ ನೆರೆ ಪರಿಸ್ಥಿತಿ ಇತ್ತು. ಅಲ್ಲಿನ ಸಮಸ್ಯೆಗಳ ಬಗ್ಗೆ ಚಕಾರವೆತ್ತದ ಪ್ರಧಾನಿ ಮೋದಿ, 370ನೇ ವಿಧಿ ರದ್ದು ಬಗ್ಗೆ ಪ್ರಚಾರ ನಡೆಸುತ್ತಿದ್ದರು ಎಂದು ಟೀಕಿಸಿದರು.

ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಸಾರವಾದ ಮತಗಟ್ಟೆ ಸಮೀಕ್ಷೆಗಳೆಲ್ಲ ಸುಳ್ಳಾಗಿವೆ. ಈ ಎರಡು ರಾಜ್ಯಗಳಲ್ಲಿ ಗೆಲುವು ಸಾಧಿಸಲೇಬೇಕೆಂದು ಮೋದಿ ಹಾಗೂ ಅಮಿತ್ ಶಾ ‘ಆಪರೇಷನ್ ಕಮಲ’ ಸೇರಿದಂತೆ ಏನೆಲ್ಲ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ದೇಶದಲ್ಲಿ ವಿರೋಧ ಪಕ್ಷಗಳೇ ಇರಬಾರದೆಂದು ಹೊರಟಿರುವ ಬಿಜೆಪಿಯವರ ಪಾಲಿಗೆ ಮುಂದಿನ ದಿನಗಳು ಹೂವಿನ ಹಾಸಿಗೆ ಅಲ್ಲ ಎಂಬುದು ಮನವರಿಕೆ ಯಾದಂತಿದೆ. ಕೇಂದ್ರ ಸರಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು, ವಿರೋಧ ಪಕ್ಷದ ಮುಖಂಡರನ್ನು ಹೆದರಿಸಿ, ಬೆದರಿಸಿ ತನ್ನತ್ತ ಸೆಳೆದುಕೊಳ್ಳಲು ಪ್ರಯತ್ನಿಸಿದೆ ಎಂದು ಅವರು ಆರೋಪಿಸಿದರು.

ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶವು ನಮ್ಮ ರಾಜ್ಯದ ಮತದಾರರ ಮೇಲೂ ಪ್ರಭಾವ ಬೀರಬಹುದು. ಬಿಜೆಪಿ ಸರಕಾರ ರಾಜ್ಯದ ಅಭಿವೃದ್ಧಿಗಾಗಿ ಏನು ಮಾಡಿದೆ ಎಂಬುದು ಮುಖ್ಯ. ನಮ್ಮ ರಾಜ್ಯದಲ್ಲಿ ಕೇವಲ ಉಪ ಚುನಾವಣೆ ನಡೆಯುತ್ತೋ ಅಥವಾ ಸಾರ್ವತ್ರಿಕ ಚುನಾವಣೆ ನಡೆಯುತ್ತದೆಯೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

15 ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳದೇ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ. ಕಾಂಗ್ರೆಸ್ ಪಕ್ಷ ಹಾಗೂ ನಮ್ಮ ನಡುವೆ ವೈರತ್ವ ಹಾಗೂ ಉತ್ತಮ ಸಂಬಂಧ ಎರಡು ಇರಬಹುದು. ಆದರೆ, ಕಾರ್ಯಕರ್ತರ ನಡುವಿನ ಹೊಂದಾಣಿಕೆ ಬಗ್ಗೆ ಎರಡು ಪಕ್ಷಗಳಿಗೂ ಅರಿವಿದೆ ಎಂದು ಅವರು ತಿಳಿಸಿದರು.

ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಯಡಿಯೂರಪ್ಪ ಬಿಜೆಪಿ ವಿರುದ್ಧ ಸಿಡಿದೆದ್ದು ಕೆಜೆಪಿ ಕಟ್ಟಿದ್ದರಿಂದ 2013ರಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸರಕಾರ ರಚನೆ ಮಾಡಲು ಸಾಧ್ಯವಾಯಿತು. ಇಲ್ಲದಿದ್ದರೆ, ಸಿದ್ದರಾಮಯ್ಯ ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ ಎಂದರು. 

ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರಧಾರೆ ಯೋಜನೆಗಳನ್ನು ಸಿದ್ದರಾಮಯ್ಯ ಪ್ರಸ್ತಾಪ ಮಾಡುತ್ತಿದ್ದಾರೆ. ಜೆಡಿಎಸ್ ಪಕ್ಷವನ್ನು ಮುಗಿಸಿ ಬಿಟ್ಟಿದ್ದೇವೆ ಎಂಬ ಮನೋಭಾವನೆಯನ್ನು ಬೆಳೆಸಿಕೊಂಡಿದ್ದಾರೆ. ಸ್ವಾಭಿಮಾನಕ್ಕೆ ಮತ ನೀಡಿ ಎಂದು ಭಾಷಣ ಮಾಡುತ್ತಿದ್ದಾರೆ. ಸ್ವ ಪ್ರತಿಷ್ಠೆಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಅನ್ನೋದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಲಿ ಎಂದು ಕುಮಾರಸ್ವಾಮಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News