ರಾಜ್ಯ ಬಿಜೆಪಿ ಸರಕಾರ ‘ಕೋಮಾ’ದಲ್ಲಿದೆ: ದಿನೇಶ್ ಗುಂಡೂರಾವ್
ಮಂಗಳೂರು, ಅ. 25: ಬಹುಮತವಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಉರುಳಿಸಿ ಅಧಿಕಾರಕ್ಕೇರಿದ ರಾಜ್ಯ ಬಿಜೆಪಿ ಸರಕಾರಕ್ಕೆ ಇದೀಗ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ. ಪಕ್ಷದೊಳಗಿನ ಆಂತರಿಕ ಕಚ್ಚಾಟವು ಸರಕಾರದ ಮೇಲೆ ಪರಿಣಾಮ ಬೀರಿದ್ದು, ಅದೀಗ ಕೋಮಾದಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಅಧಿಕಾರದ ಆಸೆಗಾಗಿ ಬಿಜೆಪಿಯು ಮೈತ್ರಿ ಸರಕಾರವನ್ನು ಉರುಳಿಸಿತ್ತು. ಆದರೆ ಇದೀಗ ಬಿಜೆಪಿ ಆಡಳಿತ ನಡೆಸಲಾಗದ ಸ್ಥಿತಿಯಲ್ಲಿದೆ. ಭೀಕರ ಪ್ರಕೃತಿ ವಿಕೋಪ ಸಂಭವಿಸಿದರೂ ಕೂಡ ಅದನ್ನು ನಿಭಾಯಿಸಲಾಗದ ಅಸಹಾಯಕ ಸ್ಥಿತಿಯಲ್ಲಿ ರಾಜ್ಯ ಸರಕಾರವಿದೆ. ಸಕಾಲಕ್ಕೆ ಎಚ್ಚೆತ್ತುಕೊಂಡು ಕೆಲಸ ಮಾಡಬೇಕಾದ ಸರಕಾರಕ್ಕೆ ಏನು ಮಾಡಬೇಕು ಎಂದು ಗೊತ್ತಾಗುತ್ತಿಲ್ಲ. ಆರಂಭದ ದಿನಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಒನ್‌ಮ್ಯಾನ್ ಶೋ ಮಾಡಿದರೆ ಬಳಿಕ ಸಂಪುಟ ರಚಿಸಿದರೂ ಕೂಡ ಮಂತ್ರಿಗಳಿಗೆ ತೃಪ್ತಿ ಎಂಬುದೇ ಇಲ್ಲ. ಒಬ್ಬರನ್ನೊಬ್ಬರು ಕಂಡರಾಗದ ಸ್ಥಿತಿಯಲ್ಲಿ ಬಿಜೆಪಿಯ ಶಾಸಕರು, ಸಚಿವರಿದ್ದಾರೆ. ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದ 23 ಜಿಲ್ಲೆಗಳಲ್ಲಿ ಮಳೆ ಹಾನಿ, ನೆರೆ ಹಾವಳಿ ವಿಪರೀತವಾಗಿದೆ. ಲಕ್ಷಾಂತರ ಮಂದಿ ಬೀದಿ ಪಾಲಾಗಿದ್ದಾರೆ. ಬೆಳೆಹಾನಿ ತೀವ್ರವಾಗಿದೆ. ಸರಕಾರ ಪರಿಹಾರ ಧನ ಘೋಷಿಸಿದರೂ ಪೂರ್ಣ ಪ್ರಮಾಣದಲ್ಲಿ ಪರಿಹಾರ ಧನ ವಿತರಿಸಿಲ್ಲ. ಆಡಳಿತ ಯಂತ್ರ ಚುರುಕುಗೊಂಡಿಲ್ಲ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದಲ್ಲಿ ಪ್ರಕೃತಿ ವಿಕೋಪ ಭೀಕರವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ರಾಜ್ಯವನ್ನು ನಿರ್ಲಕ್ಷಿಸಿದ್ದಾರೆ. ಬೇರೆಲ್ಲಾ ಕೆಲಸ ಮಾಡಲು ಆತುರ ತೋರುವ ಪ್ರಧಾನಿ ರಾಜ್ಯಕ್ಕೆ ಇನ್ನೂ ಭೇಟಿ ನೀಡಿಲ್ಲ. ಸೌಜನ್ಯಕ್ಕೂ ರಾಜ್ಯದ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ ಬಿಜೆಪಿಯ ಯಾವೊಬ್ಬ ನಾಯಕನಿಗೂ ಮೋದಿಯ ಮುಂದೆ ನಿಂತು ಮಾತನಾಡುವ ಧೈರ್ಯವಿಲ್ಲ. ಉಪಚುನಾವಣೆಯ ದೃಷ್ಟಿಯಲ್ಲಿಟ್ಟುಕೊಂಡು 1,200 ಕೋ.ರೂ. ಪರಿಹಾರ ಧನ ಘೋಷಿಸಿದ್ದು ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಮುಖ್ಯಮಂತ್ರಿ ಯಡಿಯೂರಪ್ಪರ ಬಗ್ಗೆ ನಮಗೆ ಕನಿಕರವಿದೆ. ಅವರು ಆಡಳಿತ ನಡೆಸಲು ಅಸಹಾಯಕರಾಗಿದ್ದಾರೆ. ಪಕ್ಷದಲ್ಲಿ ಅವರ ಮಾತನ್ನು ಕೇಳುವವರಿಲ್ಲವಾಗಿದೆ. ಹಾಲಿ ಸರಕಾರವು ರಾಜ್ಯಕ್ಕೆ ಶಾಪವಾಗಿ ಪರಿಣಮಿಸಿದ್ದು, ಅದರ ವಿಮೋಚನೆಗಾಗಿ ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಮತ ಚಲಾಯಿಸಬೇಕಾಗಿದೆ. ದೇಶದ ವಿವಿಧೆಡೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಜನತೆ ಕೈ ಹಿಡಿದಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್ ಪರ ಪೂರಕ ವಾತಾವರಣವಿದೆ. ಈ ಹಿಂದೆ ಕಾಂಗ್ರೆಸ್ ಸರಕಾರ ಹಮ್ಮಿಕೊಂಡ ಯೋಜನೆಗಳೇ ಪಕ್ಷಕ್ಕೆ ಶ್ರೀರಕ್ಷೆಯಾಗಲಿದೆ ಎಂದು ದಿನೇಶ್ ಗುಂಡೂರಾವ್ ನುಡಿದರು.
ನಳಿನ್‌ಗೆ ಮಾಹಿತಿಯ ಕೊರತೆ
ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಮಾಹಿತಿಯ ಕೊರತೆ ಇದೆ. ಮಾಹಿತಿಯಿಲ್ಲದೆ ಅವರು ಬೇಕಾಬಿಟ್ಟಿ ಮಾತನಾಡುತ್ತಾರೆ. ಬೆಂಕಿ ಹಚ್ಚುವುದು ಬಿಟ್ಟು ಅವರಿಗೆ ಬೇರೇನೂ ಗೊತ್ತಿಲ್ಲ. ಇನ್ನಾದರು ಅವರು ಪ್ರತಿಯೊಂದು ವಿಚಾರದ ಬಗ್ಗೆ ತಿಳಿದುಕೊಂಡು ಮಾತನಾಡುವುದು ಒಳಿತು. ಬಾಲಿಶ ಹೇಳಿಕೆ ನೀಡುವುದನ್ನು ಅವರು ನಿಲ್ಲಿಸಲಿ. ಅವು ಅವರಿಗೆ ಶೋಭೆ ತಾರದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಅನರ್ಹರು ಅನಗತ್ಯ: ಅನರ್ಹ ಶಾಸಕರ ಪೈಕಿ ಕೆಲವರು ಪಕ್ಷಕ್ಕೆ ಮರಳಿ ಬರುವ ಇಂಗಿತ ವ್ಯಕ್ತಪಡಿಸಿದ್ದರೂ ಅವರ ಅಗತ್ಯ ಪಕ್ಷಕ್ಕಿಲ್ಲ ಎಂದು ದಿನೇಶ್ ಗುಂಡೂರಾವ್ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಮೋದ್ ಬಗ್ಗೆ ತೀರ್ಮಾನ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಇದೀಗ ಅವರು ಮರಳಿ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಬಗ್ಗೆ ನಮ್ಮೊಂದಿಗೆ ಚರ್ಚೆ ನಡೆಸಿದ್ದಾರೆ. ಇತ್ತೀಚೆಗೆ ನಡೆದ ಮಂಜೇಶ್ವರ ಉಪಚುನಾವಣೆಯಲ್ಲಿ ಅವರು ಯುಡಿಎಫ್ ಅಭ್ಯರ್ಥಿಯ ಪರ ಪ್ರಚಾರವನ್ನೂ ನಡೆಸಿದ್ದಾರೆ. ಆದಾಗ್ಯೂ ಅವರ ಸೇರ್ಪಡೆ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ದಿನೇಶ್ ಗುಂಡೂರಾವ್ ಹೇಳಿದರು.
ಅ. 30ರೊಳಗೆ ಅಂತಿಮ: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಅಧಿಕವಿದೆ. ಅ.30ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಎಂಬುದನ್ನು ಅಂತಿಮಗೊಳಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗು ಜಿಲ್ಲೆಯ ಉಸ್ತುವಾರಿ ವಿಷ್ಣುನಾಥನ್, ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮನಪಾ ಚುನಾವಣಾ ಉಸ್ತುವಾರಿ ಹಾಗು ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಶಾಸಕರಾದ ರಮಾನಾಥ ರೈ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೋ, ವಿಜಯ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಪಕ್ಷದ ಮುಖಂಡ ಸೂರಜ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.