ಡಿ.ಕೆ.ಶಿವಕುಮಾರ್ ಯುದ್ಧ ಗೆದ್ದು ಬಂದಿಲ್ಲ: ಸಚಿವ ಆರ್.ಅಶೋಕ್
ಹುಬ್ಬಳ್ಳಿ, ಅ. 26: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಯಾವುದೇ ಯುದ್ಧ ಗೆದ್ದು ಬಂದಿಲ್ಲ. ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಿದ್ದು ಸರಿಯಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಆಕ್ಷೇಪಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರ ವಿರುದ್ಧದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿರುವ ವೇಳೆ ಈ ರೀತಿಯಲ್ಲಿ ಅದ್ದೂರಿಯಾಗಿ ಕಾಂಗ್ರೆಸ್ ಪಕ್ಷದಿಂದ ಸ್ವಾಗತಿಸಿರುವುದು ಸಲ್ಲ ಎಂದು ಇದೇ ವೇಳೆ ಟೀಕಿಸಿದರು.
ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ: ಅನರ್ಹರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅನರ್ಹರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ ಎಂದು ಅಶೋಕ್ ಸ್ಪಷ್ಟಪಡಿಸಿದರು.
ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ಮಾಡುತ್ತಿದೆ. ಮನೆ ಬಿದ್ದವರಿಗೆ 5 ಲಕ್ಷ ರೂ. ಹಾಗೂ ನಿವೇಶನವನ್ನು ಉಚಿತವಾಗಿ ನೀಡಲಾಗುತ್ತಿದೆ. ಸುರಕ್ಷಿತ ಸ್ಥಳಕ್ಕೆ ಪುನರ್ವಸತಿ ಕಲ್ಪಿಸಲಾಗುತ್ತಿದೆ ಎಂದ ಅವರು, ಸಂತ್ರಸ್ತರಿಗೆ ಪರಿಹಾರ ನೀಡಲು ಸರಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ ಎಂದು ತಿಳಿಸಿದರು.