ಕೊಹ್ಲಿ ಪಡೆಗೆ ಬೆದರಿಕೆ ಪತ್ರ

Update: 2019-10-29 17:42 GMT

ಹೊಸದಿಲ್ಲಿ, ಅ.29: ಭಾರತದ ಕ್ರಿಕೆಟ್ ತಂಡಕ್ಕೆ ಅನಾಮಧೇಯ ಬೆದರಿಕೆ ಪತ್ರವೊಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೈ ಸೇರಿದ್ದು, ತಂಡಕ್ಕೆ ನೀಡಲಾಗಿರುವ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.

ನವೆಂಬರ್ 3 ರಂದು ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟ್ವೆಂಟಿ- 20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲಿರುವ ಭಾರತೀಯ ಕ್ರಿಕೆಟ್ ತಂಡಕ್ಕೆ ಗರಿಷ್ಠ ಭದ್ರತೆ ನೀಡುವಂತೆ ದಿಲ್ಲಿ ಪೊಲೀಸರಿಗೆ ಸೂಚಿಸಲಾಗಿದೆ. ಟೀಮ್ ಇಂಡಿಯಾ, ವಿಶೇಷವಾಗಿ ನಾಯಕ ವಿರಾಟ್ ಕೊಹ್ಲಿ ಬೆದರಿಕೆ ಪಟ್ಟಿಯಲ್ಲಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ದಿಲ್ಲಿ ಪೊಲೀಸ್ ಮೂಲಗಳ ಪ್ರಕಾರ, ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್, ಗೃಹ ಸಚಿವ ಅಮಿತ್ ಶಾ, ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ, ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಭಯೋತ್ಪಾದಕರ ಹಿಟ್ ಲೀಸ್ಟ್‌ನಲ್ಲಿದ್ದಾರೆ.

ಎನ್‌ಐಎ ಈ ಪತ್ರವನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ರವಾನಿಸಿದೆ. ಭಾರತವು ಬಾಂಗ್ಲಾದೇಶ ವಿರುದ್ಧ ಮೂರು ಟ್ವೆಂಟಿ-20 ಪಂದ್ಯಗಳನ್ನು ಆಡಲಿದ್ದು, ಮೊದಲ ಪಂದ್ಯ ರವಿವಾರ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿಯ ನಂತರ ಎರಡು ಟೆಸ್ಟ್ ಪಂದ್ಯಗಳು ನಡೆಯಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News