×
Ad

ಉಡುಪಿ: ಪ್ರಾಥಮಿಕ-ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

Update: 2019-10-30 17:58 IST

ಉಡುಪಿ, ಅ.30: ಉಡುಪಿ ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಸಹಯೋಗದೊಂದಿಗೆ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ 2019-20ನೆ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ ಕ್ಕೆ ಬುಧವಾರ ಉಡುಪಿ -ಚಿಕ್ಕಮಗಳೂರು ಸಂಸದೆ ಶೆಭಾ ಕರಂದ್ಲಾಜೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕ್ರೀಡೆಗೆ ಪ್ರೋತ್ಸಾಹ ನೀಡುವುದು ಸರಕಾರದ ಕರ್ತವ್ಯ ಆಗಿದೆ. ಕ್ರೀಡಾ ಕ್ಷೇತ್ರದಲ್ಲಿ ಮಕ್ಕಳಿಗೆ ಸರಿಯಾದ ಪ್ರೋತ್ಸಾಹ ಹಾಗೂ ತರಬೇತಿ ನೀಡಿದರೆ ಮುಂದೆ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿ ಸಲು ಸಾಧ್ಯವಾಗುತ್ತದೆ. ಕೇವಲ ಓದು ಮಾತ್ರವಲ್ಲದೆ ಅದರೊಂದಿಗೆ ಕ್ರೀಡೆಗೂ ಸಮಯ ಮೀಸಲಿರಿಸಬೇಕು ಎಂದರು.

ಮನುಷ್ಯನ ದೇಹ ಗಟ್ಟಿಯಾಗಿದ್ದರೆ ಮನಸ್ಸು ಗಟ್ಟಿಯಾಗಿರಲು ಸಾಧ್ಯ. ಇದರಿಂದ ಕ್ರೀಡೆಯಲ್ಲಿ ಮಹತ್ತರ ಸಾಧನೆ ಮಾಡಬಹುದಾಗಿದೆ. ಆ ಮೂಲಕ ದೇಶವನ್ನು ಪ್ರತಿನಿಧಿಸುವ ಶಕ್ತಿ ಮಕ್ಕಳಿಗೆ ಲಭಿಸುತ್ತದೆ. ಗೆಲುವು ಮುಖ್ಯವಾಗಿರಿಸಿ ಕೊಳ್ಳದೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕೆಂದು ಎಂದು ಹೇಳಿದರು.

ಅಧ್ಯಕ್ಷತೆಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ದಿನಕರ ಬಾಬು, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ನಗರಸಭಾ ಸದಸ್ಯೆ ರಶ್ಮಿ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಂಜುಳ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಮಧುಕರ ಎಸ್., ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಶ್ವನಾಥ ಬಾಯರಿ, ಕಾಲೇಜು ಪ್ರಾಂಶುಪಾಲ ಎಸ್. ರುದ್ರೇಗೌಡ, ಎಸ್‌ಡಿಎಂಸಿ ಉಪಾಧ್ಯಕ್ಷೆ ತಾರಾದೇವಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅಲ್ವಿನ್, ಕಾಶಿನಾಥ್ ಪೈ, ಸುದರ್ಶನ್ ಮೊದಲಾದವರು ಉಪಸ್ಥಿತರಿದ್ದರು.

ಬ್ಯಾಡ್ಮಿಂಟನ್ ಸಂಘಟನಾ ಸಮಿತಿ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಸ್ವಾಗತಿಸಿದರು. ಗೋಪಾಲ ಶೆಟ್ಟಿ ಮಲ್ಪೆ ಕಾರ್ಯಕ್ರಮ ನಿರೂಪಿಸಿದರು. ಈ ಪಂದ್ಯಾಟದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ, ಕಲ್ಬುರ್ಗಿ ವಿಭಾಗಗಳಿಂದ ಆಯ್ಕೆಯಾದ ತಲಾ 20 ವಿದ್ಯಾರ್ಥಿಗಳಂತೆ ಒಟ್ಟು 80 ಮಂದಿ ಸ್ಪರ್ಧಾಳುಗಳು ಭಾಗವಹಿಸಿದ್ದು, 30 ಮಂದಿ ತಂಡ ವ್ಯವಸ್ಥಾಪಕರು ಪಾಲ್ಗೊಂಡಿದ್ದಾರೆ. ಇವರಲ್ಲಿ ಆಯ್ಕೆಯಾದ 20 ಮಂದಿ ಉತ್ತರಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯಮಟ್ಟದ ಪಂದ್ಯಾಟದಲ್ಲಿ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News