ಸಿಸಿಬಿ ಪೊಲೀಸರ ಕಾರ್ಯಾಚರಣೆ: ವಿವಿಧ ಪ್ರಕರಣಗಳ 500ಕ್ಕೂ ಹೆಚ್ಚು ಆರೋಪಿಗಳ ಬಂಧನ

Update: 2019-10-30 14:01 GMT

ಬೆಂಗಳೂರು, ಅ.30: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 105 ಪ್ರಕರಣಗಳನ್ನು ದಾಖಲಿಸಿ, 500ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿ 4 ಕೋಟಿ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಸಿಬಿ ಪೊಲೀಸರು ಕಳೆದ ಒಂದು ತಿಂಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 4 ಮಂದಿ ಹಳೆ ಆರೋಪಿಗಳನ್ನು ಬಂಧಿಸಿ 35 ಲಕ್ಷ ರೂ.ಬೆಲೆಬಾಳುವ 1 ಕೆಜಿ 200 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್ ಅವರು ಈ ಬಗ್ಗೆ ಮಾಹಿತಿ ನೀಡಿದರು.

ಆರೋಪಿ ಶ್ರೀನಿವಾಸ್ ಎಂಬಾತನನ್ನು ಬಂಧಿಸಿ 912 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡು ಒಟ್ಟು 14 ಕನ್ನ ಕಳವು ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ತಮಿಳುನಾಡಿನ ಹಳೆ ಆರೋಪಿಗಳಾದ ಶ್ರೀನಿವಾಸ್, ಕೃಷ್ಣ ಮತ್ತು ರವಿ ಎಂಬುವವರನ್ನು ಬಂಧಿಸಿ 265 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಮನ ಬೇರೆಡೆ ಸೆಳೆದು ಪ್ರಕರಣಗಳನ್ನು ಪತ್ತೆಹಚ್ಚಿ 35 ಲಕ್ಷ ಬೆಲೆಯ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಆರ್‌ಎಂಸಿ ಯಾರ್ಡ್ ವ್ಯಾಪ್ತಿಯ ಗೊರಗುಂಟೆ ಪಾಳ್ಯದ ಜಂಕ್ಷನ್ ಬಳಿ ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ತಾವು ಪೊಲೀಸರೆಂದು ಹೇಳಿಕೊಂಡು 1 ಕೋಟಿ ರೂ.ದರೋಡೆ ಮಾಡಿದ್ದ ಪ್ರಕರಣವನ್ನು ಭೇದಿಸಿದ್ದಾರೆ. ಅಲ್ಲದೆ, ಕಾಫಿರೈಟ್ ಕಾಯಿದೆ ಉಲ್ಲಂಘನೆ ಅಡಿಯಲ್ಲೂ 39 ಮಂದಿಯನ್ನು ಬಂಧಿಸಿದ್ದಾರೆ.

6 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ಸೇರಿ ಒಟ್ಟು 23 ದಾಳಿ ಪ್ರಕರಣಗಳನ್ನು ದಾಖಲಿಸಿ ಆರೋಪಿಗಳು ಜೂಜಾಟಕ್ಕೆ ಪಣವಾಗಿಟ್ಟಿದ್ದ 78 ಲಕ್ಷ ರೂ.ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ವಾಣಿಜ್ಯ ಬಳಕೆಗೆ ರೀಫಿಲ್ಲಿಂಗ್ ಮಾಡುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿ 900 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿಯ ಮಹಿಳೆ ಮತ್ತು ಮಾದಕ ದ್ರವ್ಯ ದಳದ ಅಧಿಕಾರಿಗಳು ಕಳೆದ 3 ತಿಂಗಳಲ್ಲಿ ವಿವಿಧ ಪ್ರಕರಣಗಳನ್ನು ಪತ್ತೆ ಮಾಡಿ 1.32 ಲಕ್ಷ ನಗದು ಸೇರಿ 85 ಲಕ್ಷ ಬೆಲೆಯ ವಿವಿಧ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿ ಸಂಘಟಿತ ಅಪರಾಧ ದಳದ ಅಧಿಕಾರಿಗಳು ದರೋಡೆ, ಸುಲಿಗೆ ಮಾಡುತ್ತಿದ್ದ 47 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ. 60 ಜನ ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿದ್ದು, ಅವರುಗಳನ್ನು ಸ್ವದೇಶಕ್ಕೆ ವಾಪಸ್ ಕಳುಹಿಸುವ ಕಾರ್ಯ ಪ್ರಗತಿಯಲ್ಲಿದೆ. ಮೀಟರ್ ಬಡ್ಡಿ ಪಡೆದು ಸಾರ್ವಜನಿಕರನ್ನು ಶೋಷಣೆ ಮಾಡುತ್ತಿದ್ದ ವ್ಯಕ್ತಿಗಳ ವಿರುದ್ಧ ದುಬಾರಿ ಬಡ್ಡಿ ನಿಷೇಧ ಕಾಯ್ದೆಯಡಿ ಬೆಂಗಳೂರು ನಗರ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News