ಚಾಮರಾಜನಗರ: ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾಧಿಕಾರಿ ಚಾಲನೆ; ಉಸ್ತುವಾರಿ ಸಚಿವರ ಗೈರು
ಚಾಮರಾಜನಗರ: ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿಯಾಗಿರುವ ಚಾಮರಾಜನಗರ ಜಿಲ್ಲೆಯ ಜಿಲ್ಲಾ ಮಟ್ಟದ 64ನೇ ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ 64 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರವರು ಗೈರಾಗಿದ್ದರು.
ಶುಕ್ರವಾರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಂಬೇಡ್ಕರ್ ಕ್ರೀಡಾಂಗಣಕ್ಕೆ ಆಗಮಿಸಿ ರಾಷ್ಟ್ರ ಧ್ವಜ ಹಾಗೂ ನಾಡಧ್ವಜಾರೋಹಣ ನೆರವೇರಿಸಿ, ಕವಾಯಿತು ಮೈದಾನದಲ್ಲಿ ವಿವಿಧ ಶಾಲಾ ಮಕ್ಕಳು ಹಾಗೂ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವರಿಂದ ಗೌರವ ವಂದನೆ ಸ್ವೀಕರಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಮೂರು ರಾಜ್ಯಗಳ ಗಡಿಯಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕನ್ನಡ ಭಾಷೆ, ಸಂಸ್ಕೃತಿಯ ಮೆರುಗು ಹೆಚ್ಚಾಗುತ್ತಿದೆ. ಇದಕ್ಕೆ ಜಿಲ್ಲೆಯಲ್ಲಿನ ಕನ್ನಡ ಹೋರಾಟಗಾರರ ಶ್ರಮ ಕಾರಣ ಎಂದು ಬಣ್ಣಿಸಿ, ಕನ್ನಡ ಭಾಷೆಯ ಇತಿಹಾಸವನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಮೊದಲು ಮಾತೃ ಭಾಷೆಗೆ ಗೌರವ ನೀಡುವಂತರಾಬೇಕು. ಇಡೀ ವರ್ಷ ಕನ್ನಡತನ ಬಗ್ಗೆ ಅರಿವು ಬಳಕೆ ಗೌರವ ನೀಡುತ್ತಿರಬೇಕು. ಪರ ಭಾಷಿಗರಿಗೂ ಕನ್ನಡ ಭಾಷೆ ಕಲಿಸುವ ಮೂಲಕ ಆದರ್ಶರಾಗಬೇಕು. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಸಾರ್ವಬೌಮ ಎಂದು ಹೇಳುವ ಮೂಲಕ ಕನ್ನಡ ಭಾಷೆ ಉಳಿಸಿ ಬೆಳಸುವಂತೆ ಕರೆ ನೀಡಿದರು.
ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಶಿವಮ್ಮ ಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹೆಚ್.ಡಿ. ಆನಂದ್ ಕುಮಾರ್ ಸೇರಿದಂತೆ ಜನಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಭಾಗವಹಿಸಿದ್ದರು.
ಕ್ರೀಡಾಂಗಣದಲ್ಲಿ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಮನರಂಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಂಜೆ ನಗರದ ಶ್ರೀ ಚಾಮರಾಜೇಶ್ವರ ದೇವಾಲಯ ಮುಂಭಾಗ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ವಿವಿಧ ಶಾಲಾ ಮಕ್ಕಳಿಂದ ಮನರಂಜನಾ ಕಾರ್ಯಕ್ರಮ ಜರುಗಿದವು.