ಮೈಸೂರು: ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Update: 2019-11-04 16:47 GMT

ಮೈಸೂರು,ನ.4: ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಗಾಂಧಿ ಚೌಕದಲ್ಲಿ ಸೋಮವಾರ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು 'ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು. ಹುಬ್ಬಳ್ಳಿಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪನವರು ಅನರ್ಹ ಶಾಸಕರಿಗೆ ಬಿಜೆಪಿ ಸರ್ಕಾರದಲ್ಲಿ ಸೂಕ್ತ ಹುದ್ದೆ ನೀಡದಿರುವ ಬಗ್ಗೆ ಪಶ್ಚಾತ್ತಾಪದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರುಗಳ ರಾಜೀನಾಮೆ ಕೊಡಿಸಿ ಬಿಜೆಪಿ ಸರ್ಕಾರ ರಚನೆ ಮಾಡಿರುವ ಬಗ್ಗೆ ಕೂಲಂಕಷವಾಗಿ ಮಾತನಾಡಿದ್ದಾರೆ. ಇದರ ಸೂತ್ರಧಾರಿಯಾದ ಕೇಂದ್ರ ಗೃಹ ಸಚಿವರ ಅಣತಿಯಂತೆ ಈ ಪ್ರಕ್ರಿಯೆ ನಡೆದಿರುವ ಬಗ್ಗೆ ಮಾತನಾಡಿದ್ದಾರೆ.

ಪಕ್ಷಾಂತರ ಪ್ರಕ್ರಿಯೆಗೆ ಇಂಬು ನೀಡಿರುವುದು ಸಾಬೀತಾಗಿರುವ ಹಾಗೆ ಕಂಡು ಬಂದಿದೆ. ಇದೊಂದು ಅಸಾಂವಿಧಾನಿಕ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಯಾಗಿರುವುದರಿಂದ ರಾಷ್ಟ್ರಪತಿಗಳು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು. ಈ ಪ್ರಕ್ರಿಯೆಯಲ್ಲಿ ಅಮಿತ್ ಶಾ ಭಾಗಿಯಾಗಿರುವ ಬಗ್ಗೆ ಯಡಿಯೂರಪ್ಪನವರೇ ಸುಳಿವು ನೀಡಿರುವುದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಾಸಕ ತನ್ವೀರ್ ಸೇಠ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಕಾಮಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕೆಪಿಸಿಸಿ ಸದಸ್ಯರುಗಳಾದ ಎನ್.ಭಾಸ್ಕರ್, ಅಕ್ಬರ್ ಅಲೀಂ, ಹೆಡತಲೆ ಮಂಜುನಾಥ್, ಹುಲ್ಲಹಳ್ಳಿ ಬಸವರಾಜು, ಕಾಂಗ್ರೆಸ್ ಮುಖಂಡರಾದ ಈಶ್ವರ ಚಿಕ್ಕಡಿ, ಸುನೀಲ್ ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News