‘ಮಂಗಗಳ ಉದ್ಯಾನವನ’ ನಿರ್ಮಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಬೆಂಗಳೂರು, ನ. 5: ಮಂಗಗಳ ಉಪಟಳ ತಡೆಗಟ್ಟಲು ನೂರು ಎಕರೆ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಮಂಗಗಳ ಉದ್ಯಾನವನ(ಮಂಕಿ ಪಾರ್ಕ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ.
ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ತನ್ನ ಅಧ್ಯಕ್ಷತೆಯಲ್ಲಿ ಅರಣ್ಯ ಸಚಿವ ಸಿ.ಸಿ.ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಕುಮಾರ್‌ಬಂಗಾರಪ್ಪ, ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಉಪಸ್ಥಿತಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಶಿವಮೊಗ್ಗ, ಚಿಕ್ಕಮಗಳೂರು ಸೇರಿ ರಾಜ್ಯದಲ್ಲಿ ಮಂಗಗಳ ಉಪಟಳ ಹೆಚ್ಚಲು ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ತರಾಟೆಗೆ ತೆಗೆದುಕೊಂಡ ಅವರು, ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿನಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು. ಈ ಬಗ್ಗೆ ಸೂಚನೆ ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಮಂಗಗಳ ಉದ್ಯಾನವನ ನಿರ್ಮಾಣಕ್ಕೆ ಕೂಡಲೇ ಅಧಿಕಾರಿಗಳು ರೂಪುರೇಷೆಗಳನ್ನು ಸಿದ್ದಪಡಿಸಬೇಕು. ನೂರು ಎಕರೆ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಮಂಗಗಳ ಪಾರ್ಕ್ ಸ್ಥಾಪಿಸಿ, ಯಶಸ್ವಿಯಾದರೆ ರಾಜ್ಯಾದ್ಯಂತ ಅಗತ್ಯವಿರುವ ಕಡೆ ವಿಸ್ತರಣೆ ಮಾಡುವ ಬಗ್ಗೆ ಚಿಂತನೆ ನಡೆಸೋಣ ಎಂದು ಸೂಚನೆ ನೀಡಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಸಬೂಬು ಹೇಳುವುದನ್ನು ಬಿಟ್ಟು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಮರಗಳನ್ನು ಬೆಳೆಸಬೇಕು. ಅಲ್ಲದೆ, ಮಂಗಗಳಿಗೆ ಅಗತ್ಯ ನೀರು ಮತ್ತು ಆಹಾರ ದೊರೆಯುವಂತೆ ನೋಡಿಕೊಳ್ಳಬೇಕು. ಜತೆಗೆ ಮಂಗಗಳ ಉಪಟಳ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
‘ಶಿವಮೊಗ್ಗದಲ್ಲಿ ಮಂಗಗಳ ಹಾವಳಿಯಿಂದ ರೈತರ ಬೆಳೆ ಹಾನಿಯಾಗುತ್ತಿದ್ದು, ಮಲೆನಾಡು ಭಾಗದಲ್ಲಿ ಮಂಗಗಳಿಂದ ತೋಟಗಾರಿಕೆ ಬೆಳೆಗಳನ್ನು ನಾಶಪಡಿಸುತ್ತಿವೆ. ಆ ಭಾಗದ ಜನತೆ ಮಂಗಗಳ ಉಪಟಳದಿಂದ ಬೇಸತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮಂಗಗಳ ಉದ್ಯಾನವನ ನಿರ್ಮಿಸಬೇಕು’
-ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ