ಕನ್ನಡ ರಾಜ್ಯೋತ್ಸವ ದಿನದಂದು ಪೊಲೀಸ್ ಭದ್ರತೆ ಒದಗಿಸಲಾಗುವುದು: ಹೈಕೋರ್ಟ್‌ಗೆ ಹೇಳಿಕೆ

Update: 2019-11-06 15:32 GMT

ಬೆಂಗಳೂರು, ನ.6: ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಣೆ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸರಕಾರದ ಆದೇಶದಂತೆ ಬಿಗಿ ಪೊಲೀಸ್ ಭದ್ರತೆ ಹಾಗೂ ರಕ್ಷಣೆ ಒದಗಿಸಲಾಗುವುದು ಎಂದು ಸರಕಾರದ ಪರ ವಕೀಲರು ಹೈಕೋರ್ಟ್‌ಗೆ ಹೇಳಿಕೆ ನೀಡಿದ್ದಾರೆ.

ಈ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ಅಪರಾಧಗಳ ನಿಯಂತ್ರಣ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಬೆಳಗಾವಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನ ಆಚರಣೆ ಮಾಡಿ, ಮೆರವಣಿಗೆ ನಡೆಸುತ್ತದೆ. ಸಮಿತಿಯ ಕಾರ್ಯಕರ್ತರು ಮೆರವಣಿಗೆಯಲ್ಲಿ ಮಾರಕಾಸ್ತ್ರಗಳನ್ನು ಒಯ್ಯುತ್ತಾರೆ. ಕನ್ನಡ ರಾಜ್ಯೋತ್ಸವ ಆಚರಿಸುವ ಕನ್ನಡಿಗರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಾರೆ. ನ.1ರಂದು ನಡೆದ ಕನ್ನಡ ರಾಜ್ಯೋತ್ಸವದ ದಿನದಂದು ಪೊಲೀಸರ ಮೇಲೆ ಪಟಾಕಿ ತೂರಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದರು.

ಸರಕಾರದ ಪರ ವಾದಿಸಿದ ವಕೀಲರು, ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯೋತ್ಸವ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರತಿ ವರ್ಷ ಬಿಗಿ ಪೊಲೀಸ್ ಭದ್ರತೆ ಹಾಗೂ ರಕ್ಷಣೆ ಒದಗಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿಯನ್ನು ಇತ್ಯರ್ಥಪಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News