ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಧರಣಿ

Update: 2019-11-07 16:43 GMT

ಬೆಂಗಳೂರು, ನ.7: ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಾರೀ ಸಂಖ್ಯೆಯ ರೈತರು, ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲನಿಯ ನಿವಾಸಕ್ಕೆ ಮುತ್ತಿಗೆ ಹಾಕಲು ಪಾದಯಾತ್ರೆಗೆ ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಮಾರ್ಗ ಮಧ್ಯೆ ರೇಸ್‌ಕೋರ್ಸ್ ರಸ್ತೆಯಲ್ಲೇ ಬ್ಯಾರಿಕೇಡ್ ಹಾಕಿ ತಡೆರು.

ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರಾಜ್ಯದಲ್ಲಿ ಎರಡು ಭಾರೀ ಭೀಕರ ಪ್ರವಾಹದಿಂದಾಗಿ ಜನರು ಕಂಗಾಲಾಗಿದ್ದಾರೆ. ಆದರೆ, ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ನೆರೆಯಿಂದ 4394 ಗ್ರಾಮಗಳು ಮುಳುಗಡೆಯಾಗಿವೆ. ಸುಮಾರು 2.50 ಲಕ್ಷ ಮನೆಗಳು ನೆಲಸಮವಾಗಿವೆ. ಅಂದಾಜು 15 ಲಕ್ಷ ಎಕರೆ ಪ್ರದೇಶಗಳಲ್ಲಿ ಬೆಳೆ ನಾಶವಾಗಿದೆ. ಈ ಭೀಕರ ನೆರೆಯಿಂದ ಬದುಕು ಕಳೆದುಕೊಂಡಿರುವ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಸರಕಾರಗಳು ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಂದಾಯ ಸಚಿವ ಅಶೋಕ್ ಮನವಿ ಸ್ವೀಕಾರ: ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಕಂದಾಯ ಸಚಿವ ಆರ್.ಅಶೋಕ್ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿ, ನಮ್ಮ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ನೆರೆ ಬಂದಿದೆ. ರಾಜ್ಯ ಮತ್ತು ಕೇಂದ್ರ ಸರಕಾರಗಳು ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

ಅಧಿಕಾರಿಗಳಿಗೆ ಸೂಚನೆ: ಎನ್‌ಡಿಆರ್‌ಎಫ್ ನೀಡಿರುವ ಪರಿಹಾರ ಹಣವನ್ನು ಬ್ಯಾಂಕ್‌ಗಳು ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಗಮನಕ್ಕೆ ಬಂದಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಪರಿಹಾರ ಹಣ ಮುಟ್ಟುಗೋಲು ಹಾಕಿಕೊಳ್ಳದಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾರಿಗೆ ಪರಿಹಾರ ಸಿಕ್ಕಿಲ್ಲ ಎಂದು ಮಾಹಿತಿ ನೀಡಿದರೆ, ಅವರಿಗೆ ಪರಿಹಾರ ನೀಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಆರ್.ಅಶೋಕ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News