ಧಾರ್ಮಿಕ ಭಾವನೆಗಳಿಗೆ ಘಾಸಿ ಮಾಡಿದ ಆರೋಪ: ಸಂಸದ ಅನಂತಕುಮಾರ್ ಹೆಗಡೆಗೆ ಸಂಕಷ್ಟ

Update: 2019-11-09 12:44 GMT

ಬೆಂಗಳೂರು, ನ.9: ಅಲ್ಪಸಂಖ್ಯಾತರ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟಾಗುವಂತಹ ಭಾಷಣ ಮಾಡಿದ ಆರೋಪದಿಂದ ಕೈಬಿಡಬೇಕೆಂದು ಕೋರಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.

ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಶುಕ್ರವಾರ ವಿಚಾರಣೆ ನಡೆಸಿ, ಆರೋಪಿ ಅನಂತ ಕುಮಾರ್ ಹೆಗಡೆ ಅರ್ಜಿ ವಜಾಗೊಳಿಸಿ, ಈ ಪ್ರಕರಣ ಸಂಬಂಧ ಸಾಕ್ಷಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿದ್ದು, ಡಿ.16ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ವರದಿಯಾಗಿದೆ.

ಏನಿದು ಪ್ರಕರಣ: ಈ ಹಿಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನಂತಕುಮಾರ್ ಹೆಗಡೆ, ಶಿರಸಿಯ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡಿದ ವೇಳೆ ಪ್ರಚೋದನಾಕಾರಿ ಅಂಶಗಳನ್ನು ಪ್ರಸ್ತಾಪಿಸಿದ್ದರು ಎನ್ನುವ ಪ್ರಕರಣ ಇದಾಗಿದೆ.

ಈ ಬಗ್ಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ಚುನಾವಣಾ ಅಧಿಕಾರಿಗಳು ದಾಖಲು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News