ಅಯೋಧ್ಯೆ ತೀರ್ಪು ಹಿನ್ನೆಲೆ: ಸೆಕ್ಷನ್ 144 ಜಾರಿ, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿದ್ದ ಪೊಲೀಸರು

Update: 2019-11-09 15:47 GMT

ಬೆಂಗಳೂರು, ನ.9: ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಲು ಆಸ್ಪದ ನೀಡದಂತೆ ಇಂದು ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಸೂಕ್ಷ್ಮ, ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ರಾಜ್ಯಾದ್ಯಂತ ಸೆಕ್ಷನ್ 144 ಜಾರಿ ಮಾಡಿ, ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಯಾವುದೇ ರೀತಿಯ ವಿಜಯೋತ್ಸವ, ಪ್ರತಿಭಟನೆಗಳನ್ನು ನಡೆಸಲು ಪೊಲೀಸರು ಅವಕಾಶ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಿಯೂ ಅಹಿತಕರ ಘಟನೆಗಳು ವರದಿಯಾಗಿಲ್ಲ.

ರಾಜಕೀಯ ಮುಖಂಡರು, ಧಾರ್ಮಿಕ ನಾಯಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಸಾರ್ವಜನಿಕರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಇತ್ತೀಚೆಗಷ್ಟೇ ಬೆಂಗಳೂರಿನ ಸಿಟಿ ಮಾರುಕಟ್ಟೆ ಜಾಮಿಯಾ ಮಸೀದಿಯಲ್ಲಿ ಸುಮಾರು 250-300 ಮಂದಿ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ಆಯೋಜಿಸಿತ್ತು.

ನಿನ್ನೆ ನಡೆದ ಶುಕ್ರವಾರದ ವಿಶೇಷ ನಮಾಝ್ ಸಂದರ್ಭದಲ್ಲಿ ಬೆಂಗಳೂರಿನ ಎಲ್ಲ ಮಸೀದಿಗಳಲ್ಲಿ, ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಸಂಬಂಧ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನು ಎಲ್ಲರೂ ಗೌರವಿಸಬೇಕು. ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯಲು ಅವಕಾಶ ನೀಡಬಾರದು. ದೇಶ ಹಾಗೂ ಸಮಾಜದ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಕಂಕಣಬದ್ಧವಾಗಿರಬೇಕು ಎಂಬ ಸಂದೇಶವನ್ನು ನೀಡಲಾಗಿತ್ತು.

ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಾದ ಶಿವಾಜಿನಗರ, ಫ್ರೇಜರ್‌ಟೌನ್, ಗೋರಿಪಾಳ್ಯ, ಟ್ಯಾನರಿ ರಸ್ತೆ, ಶಾಂತಿನಗರ, ಕೆ.ಆರ್.ಮಾರುಕಟ್ಟೆ, ಚಾಮರಾಜಪೇಟೆ ಸೇರಿದಂತೆ ಇನ್ನಿತರೆಡೆ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರಿಂದ ಒಂದು ರೀತಿಯಲ್ಲಿ ಬಂದ್ ವಾತಾವರಣ ಸೃಷ್ಟಿಯಾಗಿತ್ತು. ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಲ್ಲದೆ, ಇಂದು ಬೆಳಗ್ಗೆ 6 ಗಂಟೆಯಿಂದಲೇ ಮದ್ಯ ಮಾರಾಟ ಬಂದ್ ಮಾಡಿದ್ದರು. ಬೆಂಗಳೂರು ನಗರದಲ್ಲಿ ಭದ್ರತೆಗಾಗಿ 50 ಕೆಎಸ್‌ಆರ್‌ಪಿ ತುಕಡಿಗಳು, ಒಂದು ಮೀಸಲು ಪಡೆ, 250 ಪೌರ ರಕ್ಷಕರು, 30 ನಗರ ಸಶಸ್ತ್ರ ಮೀಸಲು ಪಡೆ ತುಕಡಿ ಹಾಗೂ ಎಂಟು ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News