ಬಿಜೆಪಿ ನಾಯಕ ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ?

Update: 2019-11-10 14:31 GMT

ಬೆಂಗಳೂರು, ನ.10: ಕಾಗವಾಡ ವಿಧಾನಸಭಾ ಕ್ಷೇತ್ರದ ಅನರ್ಹ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್‌ಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆಗಳಿರುವುದರಿಂದ, ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ ಬಿಜೆಪಿಯ ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಇತ್ತೀಚೆಗಷ್ಟೇ ರಾಜು ಕಾಗೆ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆಯಾದಲ್ಲಿ ತನಗೆ ಉಪ ಚುನಾವಣೆಯಲ್ಲಿ ಟಿಕೆಟ್ ಕೊಡಿಸಬೇಕು ಎಂದು ಚರ್ಚೆ ನಡೆಸಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ವೀಕ್ಷಕರು ಹಾಗೂ ಹಿರಿಯ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ತತ್ವ-ಸಿದ್ಧಾಂತಗಳನ್ನು ಒಪ್ಪಿಕೊಂಡು ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು. ಆದರೆ, ಟಿಕೆಟ್ ನೀಡುವ ಸಂಬಂಧ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದಿದ್ದಾರೆ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷವು ಎಂಟು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನುಳಿದ 7 ಕ್ಷೇತ್ರಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಇನ್ನೆರೆಡು ದಿನಗಳಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ ಸರಕಾರದ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವುದನ್ನು ರದ್ದು ಮಾಡಿರುವ ಬಿಜೆಪಿ ಸರಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಪ್ರಥಮ ಸ್ವಾತಂತ್ರ ಹೋರಾಟಗಾರ ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದುಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧಾರ ಖಂಡನೀಯ ಎಂದರು.

ಸರಕಾರದ ವತಿಯಿಂದ ಕಾರ್ಯಕ್ರಮ ರದ್ದು ಮಾಡಿದ್ದರೂ ಸಹ ಖಾಸಗಿಯಾಗಿ ಜಯಂತಿ ಆಚರಣೆ ಮಾಡಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇವತ್ತು ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ನಮ್ಮ ಪಕ್ಷದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಮಾಡುವ ಕುರಿತು ಪಕ್ಷದ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ ಎಂದು ಅವರು ತಿಳಿಸಿದರು.

ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಈಗಾಗಲೇ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಉಳಿದ ಕ್ಷೇತ್ರಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಎಲ್ಲ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ನಾಳೆ ಬೆಳಗ್ಗೆ ಹಿರಿಯ ನಾಯಕರೊಂದಿಗೆ ಮತ್ತೊಂದು ಸಭೆ ನಡೆಸಲಾಗುವುದು ಎಂದರು.

ನ.13ರಂದು ಅನರ್ಹ ಶಾಸಕರ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡುವ ನಿರೀಕ್ಷೆಯಿದೆ. ತೀರ್ಪು ನೋಡಿಕೊಂಡು ಅಂದು ಸಂಜೆಯೇ ನಮ್ಮ ಉಳಿದ ಕ್ಷೇತ್ರಗಳಿಗೆ ನಮ್ಮ ಅಭ್ಯರ್ಥಿಗಳನ್ನು ಪ್ರಕಟಿಸುತ್ತೇವೆ. ಬಿಜೆಪಿಯ ಪರಾಜಿತ ಅಭ್ಯರ್ಥಿಗಳು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ನಮಗೆ ಗೊತ್ತಿಲ್ಲ ಎಂದು ಅವರು ಹೇಳಿದರು.

ಸಭೆಯಲ್ಲಿ ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಶಾಸಕ ಆರ್.ವಿ.ದೇವರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News