‘ಬಿಜೆಪಿಗೆ ಗುಡ್ ಬೈ’ ಹೇಳಿದ ಮಾಜಿ ಶಾಸಕ ರಾಜು ಕಾಗೆ

Update: 2019-11-11 13:03 GMT

ಬೆಂಗಳೂರು, ನ. 11: ಉಪಚುನಾವಣೆ ಟಿಕೆಟ್ ನಿರಾಕರಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಭರಮಗೌಡ (ರಾಜು) ಕಾಗೆ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ತೀರ್ಮಾನಿಸಿದ್ದಾರೆ.

ಸೋಮವಾರ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ನಾನು ಈಗಾಗಲೇ ಬಿಜೆಪಿ ಪಕ್ಷದಿಂದ ಹೊರ ಬಂದಿದ್ದು, ನ.13ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂದು ಸ್ಪಷ್ಟಣೆ ನೀಡಿದರು. 

ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ಮುಖಂಡರು ನನ್ನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಹಮತ ವ್ಯಕ್ತಪಡಿಸಿದ್ದಾರೆ. ಕಾಗವಾಡ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಭರವಸೆ ನೀಡಿದ್ದಾರೆ ಎಂದು ರಾಜು ಕಾಗೆ ತಿಳಿಸಿದರು.

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ಶ್ರೀಮಂತಗೌಡ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹರಾಗಿದ್ದು, ಸದ್ಯ ಅವರು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದು ಬಿಜೆಪಿ ಪಕ್ಷ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಹೀಗಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ, ಕಳೆದ ಚುನಾವಣೆಯಲ್ಲಿ ಸೋತಿದ್ದ ರಾಜುಕಾಗೆ ಕ್ಷಿಪ್ರ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಕಡಿಮೆ ಮತಗಳ ಅಂತರದಿಂದ ಸೋತಿದ್ದ ರಾಜು ಕಾಗೆ, ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಕಸರತ್ತು ನಡೆಸಿದ್ದರು. ಸಿಎಂ ಬಿಎಸ್‌ವೈ ಭೇಟಿ ಮಾಡಿದ್ದರು. ಆದರೆ, ಅನರ್ಹ ಶಾಸಕ ಶ್ರೀಮಂತಗೌಡ ಪಾಟೀಲ್ ಗೆ ಟಿಕೆಟ್ ನೀಡಲಿದ್ದು, ಅವರನ್ನು ಗೆಲ್ಲಿಸಿಕೊಂಡು ಬನ್ನಿ ನಿಮಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುತ್ತೇವೆ ಎಂದು ಬಿಎಸ್‌ವೈ ಸೂಚಿಸಿದ್ದರು. ನಮ್ಮ ವಿರುದ್ಧ ಸ್ಪರ್ಧಿಸಿದ್ದ ಶ್ರೀಮಂತಪಾಟೀಲ್ ಗೆಲುವಿಗೆ ಹೋರಾಡುವುದು ನನಗೆ ಇಷ್ಟವಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷ ಬಿಡುವ ನಿರ್ಧಾರ ಕೈಗೊಂಡು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೆ. ಅವರು ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಬಿಜೆಪಿಗೆ ಹಿಂದಿರುಗುವ ಪ್ರಶ್ನೆಯೇ ಇಲ್ಲ ಎಂದು ರಾಜು ಕಾಗೆ ಸ್ಪಷ್ಟಣೆ ನೀಡಿದರು.

‘ಸಿಎಂ ಯಡಿಯೂರಪ್ಪ ನನ್ನೊಂದಿಗೆ ಚರ್ಚೆ ನಡೆಸಿ ಮೌನವಾಗಿರುವಂತೆ ಸೂಚಿಸಿದರು. ಅದಕ್ಕೆ ನಾನು ಒಪ್ಪಿದ್ದೆ. ಆದರೆ, ಇದೀಗ ಅವರು ತನ್ನ ಪ್ರತಿಸ್ಪರ್ಧಿ ಶ್ರೀಮಂತಪಾಟೀಲ್ ಅವರನ್ನು ಗೆಲ್ಲಿಸಬೇಕೆಂದು ತಿಳಿಸಿದ್ದಾರೆ. ಇದಕ್ಕೆ ನಾನು ಸಾಧ್ಯವಿಲ್ಲ ಎಂದು ಹೇಳಿ ಬಿಜೆಪಿಯಿಂದ ಹೊರ ಬಂದಿದ್ದೇನೆ’

-ಭರಮಗೌಡ (ರಾಜು) ಕಾಗೆ, ಮಾಜಿ ಶಾಸಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News