ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಆತ್ಮಹತ್ಯೆ

Update: 2019-11-11 14:22 GMT

ಬೆಂಗಳೂರು, ನ.11: ಬ್ಯಾಂಕ್‌ವೊಂದರ ಸಹಾಯಕ ವ್ಯವಸ್ಥಾಪಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಇಂದಿರಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಕೋಟಕ್ ಮಹಿಂದ್ರ ಬ್ಯಾಂಕ್‌ನ ಡೆಪ್ಯುಟಿ ಮ್ಯಾನೇಜರ್ ಆಗಿದ್ದ ರೋಹಿತ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿಯ ಮಾಜಿ ಸಲಹೆಗಾರ ಹರೀಂದರ್‌ರ ಪುತ್ರರಾದ ರೋಹಿತ್ ಇಂದಿರಾನಗರದ ಫ್ಲಾಟ್‌ನಲ್ಲಿ ವಾಸವಾಗಿದ್ದರು. ರೋಹಿತ್ ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದು, ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ಅಷ್ಟಾಗಿ ಮಾತನಾಡುತ್ತಿರಲಿಲ್ಲ. ಒಂಟಿಯಾಗಿರಲು ಬಯಸುತ್ತಿದ್ದರು ಎನ್ನಲಾಗಿದೆ.

ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದ ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಬಾಗಿಲು ಒಡೆದು ನೋಡಿದಾಗ ರೋಹಿತ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ರೋಹಿತ್ ಎರಡು-ಮೂರು ದಿನಗಳ ಹಿಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News