ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ ನಿಷಿದ್ಧ

Update: 2019-11-11 14:27 GMT

ಮಂಗಳೂರು, ನ.11: ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಜಿಲ್ಲೆಯಲ್ಲಿ ಗುರುತಿಸಿರುವ ಅಪಘಾತ ವಲಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸರಕು ಸಾಗಣೆ ವಾಹನಗಳಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರನ್ನು ಕರೆದುಕೊಂಡು ಹೋಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಾಗರಿಕರ ಹಿತದೃಷ್ಟಿಯಿಂದ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇದೆ. ರಸ್ತೆಗಳನ್ನು ಸುರಕ್ಷಿತವಾಗಿಡಲು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಜಿಲ್ಲೆಯಾದ್ಯಂತ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಆದ್ಯತೆ ನೀಡಬೇಕು. ಶಾಶ್ವತ ಬ್ಯಾರಿಕೇಡ್‌ಗಳ ನಿರ್ಮಾಣ, ರಸ್ತೆ ಗುಂಡಿಗಳ ಮುಚ್ಚುವಿಕೆ, ಬೀದಿ ದೀಪಗಳನ್ನು ಸರಿಪಡಿಸುವ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸರಕಾರಿ ಸ್ವಾಮ್ಯದ ಆ್ಯಂಬುಲೆನ್ಸ್‌ಗಳಿಗೆ ಆರೋಗ್ಯ ಇಲಾಖೆಯಿಂದ ಈಗಾಗಲೇ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಖಾಸಗಿ ಆ್ಯಂಬುಲೆನ್ಸ್‌ಗಳ ಮ್ಯಾಪಿಂಗ್ ಹಾಗೂ ಜಿಪಿಎಸ್ ಉಪಕರಣಗಳನ್ನು ಅಳವಡಿಸುವುದು. ಸಂಚಾರ ನಿಯಮಗಳ ಉಲ್ಲಂಘನೆ ಕುರಿತು ಪೊಲೀಸ್ ಇಲಾಖೆಯಿಂದ ದಾಖಲಾಗಿರುವ ಪ್ರಕರಣಗಳಲ್ಲಿ ಶಿಫಾರಸ್ಸಾಗಿರುವ ಚಾಲನಾ ಅನುಜ್ಞಾ ಪತ್ರಗಳನ್ನು ಅಮಾನತುಗೊಳಿಸುವುದು. ಚಾಲನಾ ಅನುಜ್ಞಾ ಪತ್ರಗಳಲ್ಲಿ ಆಧಾರ್ ಸಂಖ್ಯೆಯನ್ನು ನಮೂದಿಸಿ ನಕಲಿ ಚಾಲನಾ ಅನುಜ್ಞಾ ಪತ್ರಗಳನ್ನು ನಿಯಂತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ಉಪಸ್ಥಿತರಿದ್ದರು.

ಚುನಾವಣಾ ಮಸ್ಟರಿಂಗ್; ಡಿಸಿ ಭೇಟಿ
ಮಂಗಳೂರು ನಗರದ ರೋಜಾರಿಯೋ ಶಾಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮಸ್ಟರಿಂಗ್ ಕಾರ್ಯ ನಡೆಯುತ್ತಿದ್ದ ಸಂದರ್ಭ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News