'ಸುತ್ತೋಲೆ ಹೊರಡಿಸಿದ ಅಧಿಕಾರಿಗಳನ್ನು ಕೂಡಲೇ ಬಂಧಿಸಿ': ಶಿಕ್ಷಣ ಇಲಾಖೆಗೆ ಮುತ್ತಿಗೆ ಹಾಕಿ ದಸಂಸ ಒತ್ತಾಯ

Update: 2019-11-12 14:26 GMT

ಬೆಂಗಳೂರು, ನ. 12: ‘ಸಂವಿಧಾನ ದಿನ’ ಆಚರಣೆ ಸಂಬಂಧ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯನ್ನು ವಿರೋಧಿಸಿ ದಸಂಸ ಕಾರ್ಯಕರ್ತರು ನೃಪತುಂಗ ರಸ್ತೆಯಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ದಸಂಸ ಕಾರ್ಯಕರ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ರಾಜ್ಯ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಅಲ್ಲದೆ, ‘ಅಂಬೇಡ್ಕರ್ ಒಬ್ಬರೆ ಸಂವಿಧಾನ ರಚಿಸಿಲ್ಲ’ ಎಂಬ ಸುತ್ತೋಲೆ ಶೋಷಿತ ಸಮುದಾಯವನ್ನು ಅವಮಾನಿಸಿದೆ ಎಂದು ಕಿಡಿಕಾರಿದರು.

ಇದೇ ವೇಳೆ ಮಾತನಾಡಿದ ಮಾವಳ್ಳಿ ಶಂಕರ್, ಕೋಮುವಾದಿ, ಜಾತಿವಾದಿ ಮನಸ್ಸುಗಳು ಆಗಿಂದಾಗ್ಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಇಂತಹ ಗೊಂದಲ ಸೃಷ್ಟಿಸುತ್ತಿದ್ದು, ಇದನ್ನು ಯಾವುದೇ ಕಾರಣಕ್ಕೂ ಶೋಷಿತರು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಸುತ್ತೋಲೆ ಹೊರಡಿಸಿದ ಅಧಿಕಾರಿಗಳ ವಿರುದ್ಧ ಕೂಡಲೇ ಎಸ್ಸಿ-ಎಸ್ಟಿ ದೌರ್ಜನ್ಯ ವಿರೋಧಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು. ನ.26ರ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಪಠ್ಯ-ಪುಸ್ತಕಗಳಲ್ಲಿ ಕೋಮುವಾದಿಕರಣವನ್ನು ಕೂಡಲೇ ನಿಲ್ಲಿಸಬೇಕು. ಒಂದು ವೇಳೆ ಈ ಘಟನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಲಕ್ಷಿಸಿದರೆ ದಸಂಸ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟವನ್ನು ರೂಪಿಸಲಿದೆ ಎಂದು ಮಾವಳ್ಳಿ ಶಂಕರ್ ಇದೇ ವೇಳೆ ಎಚ್ಚರಿಸಿದರು.

ಈ ವೇಳೆ ದಸಂಸ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ಸಿದ್ದರಾಜು, ರಮೇಶ್ ಡಾಕುಳಗಿ, ನಾಗಣ್ಣ ಬಡಿಗೇರಾ, ಮಣಿಪಾಲ್ ರಾಚಪ್ಪ, ಈರೇಶ್ ಹೀರೆಹಳ್ಳಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News