ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿಗೆ ಕೊಹ್ಲಿ ನಾಯಕತ್ವ, ನದೀಂ ಅಲಭ್ಯ

Update: 2019-11-13 06:11 GMT

ಇಂದೋರ್, ನ.12: ಇತ್ತೀಚೆಗೆ ಸ್ವದೇಶದಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವೈಟ್‌ವಾಶ್ ಮಾಡಿದ್ದ ವಿರಾಟ್ ಕೊಹ್ಲಿ ನೇತೃತ್ವದ ಭಾರತ ನ.14ರಿಂದ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯ ಕೊನೆಯ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದ ಕುಲದೀಪ್ ಯಾದವ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ರಾಂಚಿಯಲ್ಲಿ ನಡೆದಿದ್ದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಕುಲದೀಪ್ ಯಾದವ್ ಬದಲಿಗೆ ಆಯ್ಕೆಯಾಗಿದ್ದ ಸ್ಪಿನ್ನರ್ ಶಹಬಾಝ್ ನದೀಂ ತಂಡದಿಂದ ಹೊರಗುಳಿದಿದ್ದಾರೆ. ಶುಭಮನ್ ಗಿಲ್ ಭಾರತೀಯ ಪಾಳಯದಲ್ಲಿ ಸ್ಥಾನ ಉಳಿಸಿಕೊಂಡ ಇನ್ನೋರ್ವ ಯುವ ಆಟಗಾರನಾಗಿದ್ದಾರೆ.

ಭಾರತ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಆರಂಭ ಪಡೆದಿದ್ದು, 5 ಪಂದ್ಯಗಳಲ್ಲಿ ಐದರಲ್ಲೂ ಜಯ ದಾಖಲಿಸಿದೆ. ವಿಶ್ವದ ನಂ.1 ತಂಡ ಇತ್ತೀಚೆಗೆ ಸ್ವದೇಶದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯಲ್ಲಿ ಕ್ಲೀನ್‌ಸ್ವೀಪ್ ಸಾಧಿಸಿ ಇತಿಹಾಸ ನಿರ್ಮಿಸಿದ್ದಲ್ಲದೆ ಒಟ್ಟು 240 ಅಂಕ ಗಳಿಸಿತ್ತು. ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಇತರ ದೇಶಗಳನ್ನು ಹಿಂದಿಕ್ಕಿತ್ತು. ವಿರಾಟ್ ಕೊಹ್ಲಿ ಪಡೆ ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಿದ ಬಳಿಕ ಮುಂದಿನ ವರ್ಷ ನ್ಯೂಝಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದ್ದು,ಕಿವೀಸ್‌ನಾಡಿನಲ್ಲಿ ಕಠಿಣ ಸವಾಲು ಎದುರಿಸಲಿದೆ.

ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಮೊದಲ ಬಾರಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ ರಾಂಚಿಯಲ್ಲಿ ಚೊಚ್ಚಲ ದ್ವಿಶತಕ ಸಹಿತ ನಾಲ್ಕು ಇನಿಂಗ್ಸ್‌ಗಳಲ್ಲಿ ಮೂರು ಶತಕಗಳನ್ನು ಸಿಡಿಸಿದ್ದರು.

ಭಾರತದ ಟೆಸ್ಟ್ ತಂಡ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಹಾ(ವಿಕೆಟ್‌ಕೀಪರ್), ರವೀಂದ್ರ ಜಡೇಜ, ಆರ್.ಅಶ್ವಿನ್, ಕುಲದೀಪ್ ಯಾದವ್, ಮುಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಶುಭಮನ್ ಗಿಲ್, ರಿಷಭ್ ಪಂತ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News