ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಡಿಸೆಂಬರ್‌ನಲ್ಲಿ ಸಮೀಕ್ಷೆ: ಹೈಕೋರ್ಟ್‌ಗೆ ಸರಕಾರದ ಹೇಳಿಕೆ

Update: 2019-11-13 16:31 GMT

ಬೆಂಗಳೂರು, ನ.13: ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ರಾಜ್ಯಾದ್ಯಂತ ಡಿಸೆಂಬರ್ ತಿಂಗಳಲ್ಲಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ. 

ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 2013ರಲ್ಲಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಸರಕಾರದ ಪರ ವಾದಿಸಿದ ವಕೀಲ ಪಿ.ಬಿ.ಅಚ್ಚಪ್ಪ ಅವರು, ಶಿಕ್ಷಣ ಹಕ್ಕು ಕಾಯ್ದೆಗೆ ಅನುಸಾರ ಇಲ್ಲಿವರೆಗೆ ಶಾಲೆಗಳಿಗೆ ಪ್ರವೇಶಾತಿ ಪಡೆಯದ, ಪ್ರವೇಶ ಪಡೆದು ಶಾಲೆಗೆ ಹೋಗದ, ಅರ್ಧದಲ್ಲಿ ಶಾಲೆ ಬಿಟ್ಟ ಮತ್ತು ಶಾಲೆಯಿಂದ ಸಂಪೂರ್ಣವಾಗಿ ಹೊರಗುಳಿದ ಮಕ್ಕಳ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲು ಡಿಸೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ಮನೆ-ಮನೆ ಸಮೀಕ್ಷೆ ಕಾರ್ಯ ನಡೆಸಲು ತೀರ್ಮಾನಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಶಾಲೆ ಬಿಟ್ಟ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಟ್ಟದಲ್ಲಿ ಕೆಲಸ ಮಾಡುವ ‘ಶಿಕ್ಷಣ ಸಂಯೋಜಕರ’ (ಹಾಜರಾತಿ ಅಧಿಕಾರಿ) ಖಾಲಿ ಹುದ್ದೆಗಳನ್ನು 2020ರ ಫೆಬ್ರವರಿಯೊಳಗೆ ಹಂತ-ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು. ರಾಜ್ಯದಲ್ಲಿ 967 ಶಿಕ್ಷಣ ಸಂಯೋಜಕರ ಹುದ್ದೆಗಳ ಪೈಕಿ 357 ಹುದ್ದೆ ಭರ್ತಿ ಆಗಿದ್ದು, 2018ರ ಅ.6ರಿಂದ 610 ಹುದ್ದೆ ಖಾಲಿ ಇವೆ ಎಂದು ಈ ಹಿಂದೆ ಸರಕಾರ ಕೋರ್ಟ್‌ಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಹೇಳಿತ್ತು.

ಅರ್ಜಿದಾರೆ ಕಾತ್ಯಾಯಿನಿ ಚಾಮರಾಜ್ ಅವರು ವಾದಿಸಿ, ಆರ್‌ಟಿಇ ಕಾಯ್ದೆ ಪ್ರಕಾರ ಸ್ಥಳೀಯ ಆಡಳಿತ ಸಂಸ್ಥೆಗಳು ಪ್ರತಿ ವರ್ಷ ಆಯಾ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲು ಶಾಲೆ ಬಿಟ್ಟ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಿ ಅಂಕಿ-ಸಂಖ್ಯೆಗಳನ್ನು ಸಂಗ್ರಹಿಸಿಡಬೇಕು. ಆದರೆ, ಈ ಕೆಲಸ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಕಾಯ್ದೆಯಲ್ಲಿ ಹೇಳಿರುವಂತೆ ನಗರ ಸ್ಥಳೀಯ ಸಂಸ್ಥೆಗಳು ನಿಯಮಿತವಾಗಿ ಪ್ರತಿ ವರ್ಷ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ನಡೆಸುತ್ತಿವೆಯೇ? ಎಲ್ಲ ಕಡೆ ಸಮೀಕ್ಷೆ ನಡೆಸಿದ್ದರೆ, ಅಂಕಿ-ಸಂಖ್ಯೆಗಳ ದಾಖಲೆಗಳನ್ನು ನಿರ್ವಹಿಸಲಾಗುತ್ತಿದೆಯೇ? ಇಂತಹ ವ್ಯವಸ್ಥೆ ಇಲ್ಲ ಎಂದಾದರೆ, ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ತಕ್ಷಣ ನಿರ್ದೇಶನಗಳನ್ನು ನೀಡಬೇಕು ಜೊತೆಗೆ ಮುಂದಿನ ವಿಚಾರಣೆ ವೇಳೆ ಈ ಕುರಿತ ವಸ್ತುಸ್ಥಿತಿ ವರದಿ ಸಲ್ಲಿಸಬೇಕು. ಗೈರು ಹಾಜರು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ವಾಸ್ತವ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ನ್ಯಾಯಪೀಠ ಇದೇ ವೇಳೆ ಸರಕಾರದ ಪರ ವಕೀಲರಿಗೆ ನಿರ್ದೇಶನ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News