ಪಕ್ಷಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಪ್ರಧಾನಿಗೆ ಎಚ್‌ಡಿಕೆ ಮನವಿ

Update: 2019-11-13 17:15 GMT

ಬೆಂಗಳೂರು, ನ.13: ಅನರ್ಹ ಶಾಸಕರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಈ ಪಕ್ಷಾಂತರ ನಿಷೇಧ ಕಾನೂನಿನ ಅಗತ್ಯವೇನಿದೆ? ನಾವು ದೇಶದಲ್ಲಿ ಹಲವಾರು ಕಾನೂನುಗಳನ್ನು ರಚನೆ ಮಾಡುತ್ತೇವೆ. ಆದರೆ, ಅದನ್ನು ಎಷ್ಟರಮಟ್ಟಿಗೆ ಅನುಷ್ಠಾನಕ್ಕೆ ತರುತ್ತೇವೆ ಎನ್ನುವುದು ಮುಖ್ಯ ಎಂದರು.

ಬುಧವಾರ ನಗರದ ಜೆ.ಪಿ.ಭವನ(ಜೆಡಿಎಸ್ ಕಚೇರಿ)ದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನದ 370ನೇ ವಿಧಿ ಸೇರಿದಂತೆ ಇನ್ನಿತರ ಕಾನೂನುಗಳನ್ನು ಹಿಂಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಅದೇ ರೀತಿ ಪಕ್ಷಾಂತರ ನಿಷೇಧ ಕಾನೂನನ್ನು ಸಂಸತ್ತಿನಲ್ಲಿ ಹಿಂಪಡೆದುಕೊಳ್ಳುವಂತೆ ಮನವಿ ಮಾಡುತ್ತೇನೆ ಎಂದರು.

ವೈಯಕ್ತಿಕ ಅಥವಾ ಅಧಿಕಾರ ಸೇರಿದಂತೆ ಇನ್ನಿತರ ಕಾರಣಗಳಿಗಾಗಿ ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡುವ ಜನಪ್ರತಿನಿಧಿಗಳಿಗೆ ಪಕ್ಷಾಂತರ ಮಾಡಲು ಮುಕ್ತವಾದ ಅವಕಾಶವನ್ನು ಕಲ್ಪಿಸಿ ಬಿಡೋಣ. ಅನರ್ಹ ಶಾಸಕರು ಕಳೆದ ಎರಡು ತಿಂಗಳಲ್ಲಿ ಪಟ್ಟಿರುವ ಯಾತನೆ ನನಗೆ ಗೊತ್ತಿದೆ. ಪುನಃ ಅಂತಹ ಯಾತನೆ ಯಾರಿಗೂ ಬರವುದು ಬೇಡ ಎಂದು ಕುಮಾರಸ್ವಾಮಿ ಹೇಳಿದರು.

ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಹಲವಾರು ರೀತಿಯ ಪ್ರತಿಕ್ರಿಯೆಗಳು ಬರುತ್ತಿವೆ. ಈ ತೀರ್ಪಿನ ಪ್ರಮುಖ ಅಂಶ ಸ್ಪೀಕರ್ 17 ಶಾಸಕರನ್ನು ಅನರ್ಹಗೊಳಿಸಿರುವುದನ್ನು ಎತ್ತಿ ಹಿಡಿಯಲಾಗಿದೆ. ಜೊತೆಗೆ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಇದು ಒಂದು ರೀತಿಯಲ್ಲಿ ನಾನು ಹೊಡೆದಂತೆ ಮಾಡುತ್ತೇನೆ, ನೀನು ಅತ್ತಂತೆ ಮಾಡು ಎನ್ನುವಂತಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಕುಮಾರಸ್ವಾಮಿ, ಬಿಜೆಪಿ ಏನು ಸಾಧನೆ ಮಾಡಿದೆ ಎಂದು ನಾವು ಅವರ ಜೊತೆ ಒಳ ಒಪ್ಪಂದ ಮಾಡಿಕೊಳ್ಳಬೇಕು ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪರನ್ನು ಉಳಿಸುತ್ತೇವೆ ಎಂದು ದೇವೇಗೌಡರು ಹೇಳಿಲ್ಲ. ಕೇಂದ್ರದಲ್ಲೂ ಬಿಜೆಪಿ ಸರಕಾರ ಇದೆ, ರಾಜ್ಯದಲ್ಲಿಯೂ ಬಿಜೆಪಿ ಸರಕಾರ ಇರುವುದರಿಂದ, ಉಪ ಚುನಾವಣೆ ನಂತರವು ರಾಜ್ಯದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿ ಇರಲಿದೆ ಎಂದಿದ್ದರು ಎಂದು ಕುಮಾರಸ್ವಾಮಿ ಹೇಳಿದರು.

ಸಿದ್ದರಾಮಯ್ಯ ತಮ್ಮ ಸಾಧನೆ ಮೇಲೆ ಉಪ ಚುನಾವಣೆ ಎದುರಿಸಲಿ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬಿಜೆಪಿಯ ‘ಬಿ’ ಟೀಂ ಎಂದಿದ್ದರು. ಕುತಂತ್ರ ರಾಜಕಾರಣ ಮಾಡಿದ ಪರಿಣಾಮ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಸಿಗುವಂತಾಯಿತು. ಜೆಡಿಎಸ್ ವಿರುದ್ಧ ಆರೋಪಗಳನ್ನು ಮಾಡುವ ಮೂಲಕ ಬಿಜೆಪಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಿದ್ದು ಸಿದ್ದರಾಮಯ್ಯ ಎಂದು ಅವರು ದೂರಿದರು.

ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳು ಉಪ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತವೆ. ನಾವು ಈ ಎರಡು ಪಕ್ಷಗಳಿಂದ ಸಮಾನಾಂತರವಾಗಿ ದೂರ ಇದ್ದು ಚುನಾವಣೆ ಎದುರಿಸುತ್ತೇವೆ. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ನಾವು ಕಳೆದುಕೊಂಡಿರುವ ಮೂರು ಸ್ಥಾನಗಳ ಜೊತೆಗೆ ಇನ್ನೂ ಮೂರು ಸ್ಥಾನ ಗೆಲ್ಲುವ ಸಾಮರ್ಥ್ಯ ನಮಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ನೆರೆ ಸಂತ್ರಸ್ತರಿಗೆ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಪ್ರಾರಂಭಿಸಿದ ಮನೆಗಳ ನಿರ್ಮಾಣ ಕಾರ್ಯ ಇನ್ನೂ ಮುಗಿದಿಲ್ಲ. ಈ ಮನೆಗಳ ನಿರ್ಮಾಣಕ್ಕಾಗಿ 29 ಸಾವಿರ ಕೋಟಿ ರೂ. ಒದಗಿಸಬೇಕಿತ್ತು. ಆದರೆ, ಸಿದ್ದರಾಮಯ್ಯ ಕೊಟ್ಟಿದ್ದು 3500 ಕೋಟಿ ರೂ.ಮಾತ್ರ. ಇನ್ನು 10 ವರ್ಷವಾದರೂ ನೆರೆ ಸಂತ್ರಸ್ತರಿಗೆ ಮನೆಗಳನ್ನು ಕಟ್ಟಿಕೊಡಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

15 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಉದ್ದೇಶಿಸಿದ್ದೇವೆ. ನಾಳೆ ಸಂಜೆ ವೇಳೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಉದ್ದೇಶಿಸಿರುವ ಶರತ್ ಬಚ್ಚೇಗೌಡ ಬಯಸಿದರೆ ಅವರಿಗೆ ಬೆಂಬಲ ನೀಡಲು ತೀರ್ಮಾರ್ಮಾನಿಸುತ್ತೇವೆ. ಇನ್ನುಳಿದಂತೆ ಎಲ್ಲ 14 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News