ಹೊಸಕೋಟೆ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆ

Update: 2019-11-14 14:40 GMT

ಬೆಂಗಳೂರು, ನ.14: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ‘ಸ್ವಾಭಿಮಾನಿ’ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಸಿದ್ದಾರೆ.

ಗುರುವಾರ ಬೆಳಗ್ಗೆ ಬೆಂಡಿಗಾನಹಳ್ಳಿಯಲ್ಲಿರುವ ತಮ್ಮ ಮನೆಯಿಂದ ಹೊರಟ ಶರತ್ ಬಚ್ಚೇಗೌಡ, ವಿಜಯಪುರದ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಪೂಜೆ ನಡೆಸಿದರು. ಆನಂತರ ಗ್ರಾಮ ದೇವತೆ ದುಗ್ಗಲ್ಲಮ್ಮ ದೇವಸ್ಥಾನ, ಹೊಸಕೋಟೆಯ ಅವಿಮುಕ್ತೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಎಚ್.ಎಲ್.ನಾಗರಾಜ್‌ಗೆ ನಾಮಪತ್ರ ಸಲ್ಲಿಸಿದರು.

ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶರತ್ ಬಚ್ಚೇಗೌಡ, ನಾನು ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದೇನೆ. ಮೂರು ತಲೆಮಾರಿನಿಂದ ನಾವು ಇಲ್ಲಿ ರಾಜಕೀಯವಾಗಿ ಸಕ್ರಿಯವಾಗಿದ್ದೇವೆ. ನಮಗೆ ರಾಜಕಾರಣ ಮಾಡುವ ಉದ್ದೇಶ ಇರಲಿಲ್ಲ. ಜನರ ಸೇವೆ ಮಾಡುವ ಹಂಬಲ ಇತ್ತು ಎಂದರು.

ಬಿಜೆಪಿ ಹೆಸರು ಹೊಸಕೋಟೆ ಕ್ಷೇತ್ರದಲ್ಲಿ ಇರಲಿಲ್ಲ. ಬಚ್ಚೇಗೌಡರ ಪರಿಶ್ರಮದ ಫಲವಾಗಿ ಇಂದು ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದೆ. ಆದರೆ, ಇವತ್ತು ನಾವು ಕಟ್ಟಿದ ಮನೆಯಲ್ಲಿ ನಾವೇ ಇರಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರದ ಜನ ನಮ್ಮ ಮೇಲೆ ಇಟ್ಟಿರುವ ಪ್ರೀತಿ ಹಾಗೆಯೇ ಇದೆ. ಅದಕ್ಕಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಹೇಳಿದರು.

ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಸಿ ತೆರಳಿದ ನಂತರ ತಾಲೂಕು ಕಚೇರಿಗೆ ಆಗಮಿಸಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್, ಬಿಜೆಪಿ ಅಭ್ಯರ್ಥಿಯಾಗಿ ಬಿ ಫಾರಂ ಇಲ್ಲದೆಯೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ಎಂಟಿಬಿ ನಾಗರಾಜ್, ಸ್ವತಂತ್ರ ಅಭ್ಯರ್ಥಿಯಾಗಿ ಶರತ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ, ಸಂತೋಷ. ಈ ಭಾಗದ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿ ಚಿಹ್ನೆಯಡಿಯಲ್ಲಿ ಗೆದ್ದಿದ್ದಾರೆ. ನಾನು ಬಿ ಫಾರಂ ಜೊತೆಗೆ ನಾಮಪತ್ರ ಸಲ್ಲಿಸುವ ವೇಳೆ ಅವರು ಉಪಸ್ಥಿತರಿರುತ್ತಾರೆ. ನನಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲ ಬಿಜೆಪಿ ನಾಯಕರ ಬೆಂಬಲ ಇದೆ. ಸೋಮವಾರ ವಿಜೃಂಭಣೆಯಿಂದ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದರು.

ಶರತ್‌ಗೆ ಜೆಡಿಎಸ್ ಬೆಂಬಲ

ರಾಜಕೀಯದಲ್ಲಿ ಶತ್ರುಗಳೂ ಇಲ್ಲ, ಮಿತ್ರರೂ ಇಲ್ಲ. ಪ್ರಸಕ್ತ ರಾಜಕೀಯ ಮತ್ತು ಮುಂದಿನ ನಮ್ಮ ಪಕ್ಷದ ಹಿತದೃಷ್ಟಿಯಿಂದ ಹೊಸಕೋಟೆ ಕ್ಷೇತ್ರದಲ್ಲಿ ಶರತ್ ಬಚ್ಚೇಗೌಡಗೆ ಜೆಡಿಎಸ್ ಬೆಂಬಲ ಘೋಷಿಸಲಾಗಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಪ್ರಚಾರಕ್ಕೂ ತೆರಳುವೆ. ಶರತ್ ಜೊತೆ ಸಂಪರ್ಕದಲ್ಲಿದ್ದೇನೆ.

-ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News