ನೀತಿ ಸಂಹಿತೆ ಉಲ್ಲಂಘನೆ ಆರೋಪ: ಸಿಎಂ ಯಡಿಯೂರಪ್ಪ ವಿರುದ್ಧ ಚು.ಆಯೋಗಕ್ಕೆ ದೂರು

Update: 2019-11-16 17:00 GMT

ಬೆಂಗಳೂರು, ನ.16: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಾಜಿನಗರದಲ್ಲಿ ಬಹಿರಂಗವಾಗಿ ಸಚಿವ ಸ್ಥಾನ ನೀಡುವ ಭರವಸೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಶಿವಾಜಿನಗರದಲ್ಲಿ ನಡೆದ ಸಭೆಯಲ್ಲಿ ತಮಿಳು ಭಾಷಿಕರನ್ನು ಓಲೈಸಲು 'ನಿಮ್ಮದೇ ಭಾಷಿಕರಿಗೆ ಟಿಕೆಟ್ ನೀಡಲಾಗಿದೆ. ಅಲ್ಲದೆ, ಅನರ್ಹ ಶಾಸಕರನ್ನು ಸಚಿವರನ್ನಾಗಿ ಮಾಡುತ್ತೇವೆ' ಎಂದಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮಾಧ್ಯಮ ವಿಭಾಗದ ಸಂಚಾಲಕ ವಿ.ಎಸ್.ಉಗ್ರಪ್ಪ, ಮತದಾರರಿಗೆ ಸಿಎಂ ಮನವೊಲಿಕೆ ಮಾಡಲು ಭರವಸೆಗಳನ್ನು ನೀಡಿದ್ದಾರೆ. ಈ ಮೂಲಕ ಮತದಾರರ ಮೇಲೆ ಒತ್ತಡ ಹೇರಿದ್ದಾರೆ. ಇನ್ನೊಂದೆಡೆ ತಮಿಳು ಭಾಷಿಕರ ಓಲೈಕೆ ಮಡಿದ್ದು, ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಬಗ್ಗೆ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ವಿರುದ್ಧ ದೂರು ನೀಡಿದ್ದೇವೆ. 16 ಅನರ್ಹ ಶಾಸಕರು ಬಿಜೆಪಿ ಸೇರಿದ್ದಾರೆ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಹಾಗೂ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದೇವೆ ಎಂದರು.

ರಾಜ್ಯದಾದ್ಯಂತ ಉಪ ಚುನಾವಣೆ ನಡೆಯಲಿರುವ ಎಲ್ಲ ಕ್ಷೇತ್ರಗಳಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಶನಿವಾರ ರಾತ್ರಿಯೇ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದೇವೆ.

- ವಿ.ಎಸ್.ಉಗ್ರಪ್ಪ, ಮಾಜಿ ಸಂಸದ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News