ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನ

Update: 2019-11-17 14:01 GMT

ಬೆಂಗಳೂರು, ನ. 17: ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ನಾಳೆ(ನ.18)ಅಂತಿಮ ದಿನವಾಗಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ತಯಾರಿ ನಡೆಸಿದ್ದಾರೆ.

ಉಪಚುನಾವಣಾ ಕಣ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿದ್ದು, ಪ್ರಮುಖವಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ 15 ಕ್ಷೇತ್ರಗಳಲ್ಲಿ ಉಮೇದುವಾರಿಕೆ ಸಲ್ಲಿಸಲು ಮುಂದಾಗಲಿದ್ದಾರೆ. ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿ ಪ್ರಮುಖ ನಾಯಕರು ಅಭ್ಯರ್ಥಿಗಳಿಗೆ ಸಾಥ್ ನೀಡಲಿದ್ದಾರೆ.

15 ಕ್ಷೇತ್ರಗಳ ತಾಲೂಕು ಕಚೇರಿಗಳ ಸುತ್ತಮುತ್ತಲೂ ರಾಜಕೀಯ ಪಕ್ಷಗಳ ಬಲಾಬಲಕ್ಕೆ ಸಾಕ್ಷಿಯಾಗಲಿದೆ. ನಾಮಪತ್ರ ಸಲ್ಲಿಕೆ ವೇಳೆ ಐವರು ಮಾತ್ರ ಕಚೇರಿಗೆ ಆಗಮಿಸಬೇಕು. ಉಳಿದವರಿಗೆ ಪ್ರವೇಶವಿಲ್ಲ ಎಂಬ ನಿಯಮವಿರುವುದರಿಂದ, ಸುತ್ತಮುತ್ತಲೂ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸುವ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯು ಸಿದ್ಧತೆ ಕೈಗೊಂಡಿದ್ದು, ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಸಂಚಾರ ದಟ್ಟಣೆ: ಒಂದೇ ದಿನ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ನಾಮಪತ್ರ ಸಲ್ಲಿಕೆ ಮಾಡಲಿರುವ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಕಚೇರಿಯ ಸುತ್ತಮುತ್ತಲೂ ಅಧಿಕ ಸಂಚಾರ ದಟ್ಟಣೆ ಏರ್ಪಡುವ ಸಾಧ್ಯತೆಯಿದೆ. ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ನೀಡಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.

116 ನಾಮಪತ್ರಗಳ ಸಲ್ಲಿಕೆ: 15 ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರರು ಸೇರಿ 96 ಅಭ್ಯರ್ಥಿಗಳಿಂದ 116 ನಾಮಪತ್ರಗಳು ಸಲ್ಲಿಕೆಯಾಗಿವೆ.

4 ಕ್ಷೇತ್ರಗಳಲ್ಲಿ ಬಿಜೆಪಿ ನಾಮಪತ್ರ ಸಲ್ಲಿಕೆ: ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅಧಿಕೃತ ಅಭ್ಯರ್ಥಿಗಳಾಗಿ 15 ಕ್ಷೇತ್ರಗಳ ಪೈಕಿ ಈಗಾಗಲೇ 4 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಯಾಗಿವೆ. ಉಳಿದಂತೆ ಹುಣಸೂರು, ಕೆ.ಆರ್.ಪೇಟೆ, ಯಲ್ಲಾಪುರ, ರಾಣೆಬೆನ್ನೂರು, ಗೋಕಾಕ, ಕಾಗವಾಡ, ಅಥಣಿ, ವಿಜಯನಗರ, ಚಿಕ್ಕಬಳ್ಳಾಪುರ, ಹೊಸಕೋಟೆ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಯಶವಂತಪುರ ಹಾಗೂ ಕೆ.ಆರ್.ಪುರಂ ಕ್ಷೇತ್ರಗಳಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನ.21ಕ್ಕೆ ನಾಮಪತ್ರ ಹಿಂಪಡೆಯಲು ಅಂತಿಮ

‘ಹದಿನೈದು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ನಾಳೆ (ನ.18) ಅಂತಿಮ ದಿನವಾಗಿದ್ದು, ನ.19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.21ರಂದು ನಾಮಪತ್ರಗಳನ್ನು ಹಿಂಪಡೆ ಕೊನೆಯ ದಿನ. ಡಿ.5ರಂದು ಮತದಾನ ನಡೆಯಲಿದೆ’

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News