ನ.18ರಂದು ಅ.ಭಾ. ಸಹಕಾರಿ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ

Update: 2019-11-17 15:59 GMT

ಉಡುಪಿ, ನ.17: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಇತರ ಸಹಕಾರಿ ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ 66ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ನಾಳೆ ನ.18ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

 ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 3000ಕ್ಕೂ ಅಧಿಕ ಸಹಕಾರಿ ನಾಳಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 9ಗಂಟೆಗೆ ಉಡುಪಿಯ ಜೋಡುಕಟ್ಟೆಯಿಂದ ಸಹಕಾರಿಗಳು ಹಾಗೂ ನವೋದಯ ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸುವ ಬೃಹತ್ ಮೆರವಣಿಗೆ ಸಭಾ ಕಾರ್ಯಕ್ರಮ ನಡೆಯುವ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದವರೆಗೆ ಸಾಗಲಿದೆ ಎಂದರು.

ಈ ಜಾಥದಲ್ಲಿ 15ಕ್ಕೂ ಅಧಿಕ ವಿವಿಧ ಸಹಕಾರ ಕ್ಷೇತ್ರಕ್ಕೆ ಸಂಬಂಧಪಟ್ಟ ಟ್ಯಾಬ್ಲೋಗಳು ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮವನ್ನು ರಾಜ್ಯ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಕಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ರಾಜ್ಯ ವಿಧಾನಪರಿಷತ್‌ನ ಉಪ ಸಭಾಪತಿಗಳಾದ ಎಸ್.ಎಲ್.ಧರ್ಮೇಗೌಡ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಅವರು ಮಾರಾಟ ಮಳಿಗೆಯನ್ನು ಉದ್ಘಾಟಿಸಲಿದ್ದು, ಎಸ್‌ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಹಕಾರ ಜಾಥವನ್ನು ಉದ್ಘಾಟಿಸುವರು. ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಎನ್.ಗಂಗಣ್ಣ ಸಹಕಾರ ವಾರ ಪತ್ರಿಕೆಯನ್ನು ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕಕುಮಾರ್ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್‌ನ ನಿರ್ದೇಶಕ ರಾದ ಬಿ.ಎಸ್.ಶ್ರೀಧರ, ಎ.ಹರೀಶ್ ಕಿಣಿ, ಸಹಕಾರಿ ಸಂಘಗಳ ಪ್ರಭಾರಿ ಉಪ ನಿಬಂಧಕಿ ಚಂದ್ರ ಪ್ರತಿಮಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News