ರಂಗೇರಿದ ಉಪ ಚುನಾವಣಾ ಕಣ: ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

Update: 2019-11-18 14:48 GMT

ಬೆಂಗಳೂರು, ನ.18: ಕೇಂದ್ರ ಚುನಾವಣಾ ಆಯೋಗವು ಡಿಸೆಂಬರ್ 5ರಂದು ಮತದಾನ ಘೋಷಿಸಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು(ಸೋಮವಾರ) ಕೊನೆಯ ದಿನವಾಗಿದ್ದು, ಘಟಾನುಘಟಿ ಮುಖಂಡರು ನಾಮಪತ್ರ ಸಲ್ಲಿಸುವ ಮೂಲಕ, ಉಪ ಚುನಾವಣಾ ಕಣ ರಂಗೇರುವಂತೆ ಮಾಡಿದ್ದಾರೆ.

ಪ್ರತಿಷ್ಠೆಯ ಕಣವೆಂದು ಪರಿಗಣಿಸಲ್ಪಟ್ಟಿರುವ ಬೆಳಗಾವಿ ಜಿಲ್ಲೆಯ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಸಹೋದರರ ಸವಾಲು ಎದುರಾಗಿದ್ದು, ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷದಿಂದ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ. ಜೊತೆಗೆ, ಸತೀಶ್ ಜಾರಕಿಹೊಳಿಯೂ ನಾಮಪತ್ರ ಸಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದರು. ಕೊನೆಯ ಕ್ಷಣದಲ್ಲಿ ಬಿಜೆಪಿ ಮುಖಂಡ ಅಶೋಕ್ ಪೂಜಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಎಂಟಿಬಿ ನಾಗರಾಜ್, ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಭೈರತಿ ಬಸವರಾಜ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ನಾರಾಯಣಸ್ವಾಮಿ, ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಆಂಜಿನಪ್ಪ, ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್.ಪಿ.ಮಂಜುನಾಥ್, ಬಿಜೆಪಿ ಅಭ್ಯರ್ಥಿಯಾಗಿ ಎಚ್.ವಿಶ್ವನಾಥ್, ಜೆಡಿಎಸ್ ಅಭ್ಯರ್ಥಿಯಾಗಿ ಸೋಮಶೇಖರ್ ಉಮೇದುವಾರಿಕೆ ಸಲ್ಲಿಸಿದರು.

ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಾವ್ ಘೋರ್ಪಡೆ, ಬಿಜೆಪಿ ಅಭ್ಯರ್ಥಿಯಾಗಿ ಆನಂದ್‌ಸಿಂಗ್, ಕಾಗವಾಡ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜುಕಾಗೆ, ಬಿಜೆಪಿ ಅಭ್ಯರ್ಥಿಯಾಗಿ ಶ್ರೀಮಂತ್ ಪಾಟೀಲ್, ಅಥಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಕುಮಟಳ್ಳಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಗಜಾನನ ಮಂಗಸೂಳಿ ನಾಮಪತ್ರ ಸಲ್ಲಿಸಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಟಿ.ಸೋಮಶೇಖರ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಪಿ.ನಾಗರಾಜ್, ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎನ್.ಜವರಾಯಿಗೌಡ, ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಿಝ್ವನ್ ಅರ್ಶದ್, ಜೆಡಿಎಸ್ ಅಭ್ಯರ್ಥಿಯಾಗಿ ತನ್ವೀರ್ ಅಹ್ಮದ್ ಉಲ್ಲಾ, ಬಿಜೆಪಿ ಅಭ್ಯರ್ಥಿಯಾಗಿ ಸರವಣ, ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದ್ದಾರೆ.

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಮ್ ಹೆಬ್ಬಾರ್ ನಾಮಪತ್ರ ಸಲ್ಲಿಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಗೋಪಾಲಯ್ಯ, ಅವರ ಪತ್ನಿ ಹೇಮಲತಾ ಗೋಪಾಲಯ್ಯ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಗೌಡ ನಾಮಪತ್ರ ಸಲ್ಲಿಸಿದರು.

ಅದೇ ರೀತಿ, ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಹಾಗೂ ಅವರ ಪುತ್ರಿ ಸೃಷ್ಠಿ ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ. ಕೆಲವೊಮ್ಮೆ ತಾಂತ್ರಿಕ ಕಾರಣಗಳಿಂದ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಇರುವುದರಿಂದ, ಕುಟುಂಬದ ಸದಸ್ಯರು ನಾಮಪತ್ರ ಸಲ್ಲಿಸಿರುವುದು ವಿಶೇಷ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News