ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಸಿದ್ದರಾಮಯ್ಯ, ದೇವೇಗೌಡ ಆಗ್ರಹ

Update: 2019-11-18 14:50 GMT

ಬೆಂಗಳೂರು, ನ. 18: ಮಾಜಿ ಸಚಿವ ಹಾಗೂ ಹಾಲಿ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ರಾಜ್ಯ ಸರಕಾರ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಲ್ಲದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

‘ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದು ಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ, ಶಿಕ್ಷಿಸುವ ಜೊತೆಗೆ ಸಾರ್ವಜನಿಕ ಜೀವನದಲ್ಲಿರುವ ಗಣ್ಯರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಶಾಸಕರಾದ ತನ್ವೀರ್ ಸೇಠ್ ಅವರು ಮದುವೆ ಸಮಾರಂಭದಲ್ಲಿ ಭಾಗಿಯಾದ ಸಂದರ್ಭದಲ್ಲಿ ಆಗಂತುಕನೊಬ್ಬ ಅವರ ಮೇಲೆ ನಡೆಸಿರುವ ಹಲ್ಲೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಹಲ್ಲೆ ನಡೆಸಿದವರ ವಿರುದ್ಧ ರಾಜ್ಯ ಸರಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ. ತನ್ವೀರ್ ಅವರ ಪತ್ನಿಯ ಜೊತೆ ಅವರ ಆರೋಗ್ಯ ಸ್ಥಿತಿಯ ಕುರಿತು ವಿಚಾರಿಸಿದ್ದು, ಅವರು ಶೀಘ್ರವಾಗಿ ಗುಣಮುಖರಾಗಿ ಜನಸೇವೆಯಲ್ಲಿ ತೊಡಗಲಿ ಎಂದು ಹಾರೈಸುತ್ತೇನೆ’ ಎಂದು ದೇವೇಗೌಡ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News