ರಂಗೇರಿದ ಕೆ.ಆರ್.ಪೇಟೆ ಉಪಚುನಾವಣಾ ಕಣ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ

Update: 2019-11-18 15:13 GMT

ಮಂಡ್ಯ, ನ.18: ಕೆ.ಆರ್.ಪೇಟೆ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಸೋಮವಾರ ಮೂರೂ ಪಕ್ಷಗಳ ಹುರಿಯಾಳುಗಳು ನಾಮಪತ್ರ ಸಲ್ಲಿಸಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಬಿಜೆಪಿಯಿಂದ ಅನರ್ಹ ಶಾಸಕ ಕೆ.ಸಿನಾರಾಯಣಗೌಡ, ಕಾಂಗ್ರೆಸ್‍ನಿಂದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹಾಗೂ ಜೆಡಿಎಸ್‍ನಿಂದ ಬಿ.ಎಲ್.ದೇವರಾಜು ತಮ್ಮ ಅಪಾರ ಬೆಂಬಲಿಗರ ಜತೆ ಮೆರವಣಿಗೆಯಲ್ಲಿ ತೆರಳಿ ಉಮೇದುವಾರಿಕೆ ಪತ್ರ ಸಲ್ಲಿಸಿದರು.

ನಾರಾಯಣಗೌಡರಿಗೆ ಸಚಿವ ಮಾಧುಸ್ವಾಮಿ, ಬಿಎಸ್‍ವೈ ಪುತ್ರ ವಿಜಯೇಂದ್ರ, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಪತ್ನಿ ದೇವಕಿ, ಚಂದ್ರಶೇಖರ್ ಗೆ ಮಾಜಿ ಸಚಿವರಾದ ಕೆ.ರೆಹಮಾನ್ ಖಾನ್, ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಪತ್ನಿ ರಮಾಮಣಿ ಸಾಥ್ ನೀಡಿದರು.

ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಅವರ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಸಿ.ಎಸ್.ಪುಟ್ಟರಾಜು, ನಿಖಿಲ್‍ ಕುಮಾರಸ್ವಾಮಿ, ಜಿಪಂ ಸದಸ್ಯ ಮಂಜುನಾಥ್, ಪತ್ನಿ ಸರ್ವಮಂಗಳ, ಇತರ ಮುಖಂಡರು ಇದ್ದರು.

ಮೂರೂ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ವೇಳೆ ಬೃಹತ್ ಮೆರವಣಿಗೆ ನಡೆಸಿ ಶಕ್ತಿಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ, ಕೆ.ಆರ್.ಪೇಟೆ ತಾಲೂಕಿನಾದ್ಯಂತೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಆದೇಶ ಹೊರಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News