ಅಂಬೇಡ್ಕರ್‌ಗೆ ಅಪಮಾನ ಆರೋಪ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತರಗತಿಗಳ ಬಹಿಷ್ಕಾರ

Update: 2019-11-18 18:11 GMT

ಬೆಂಗಳೂರು, ನ.18: ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚನೆ ಮಾಡಿಲ್ಲ ಎಂದಿದ್ದ ಸಿಎಂಸಿಎ ಸಂಸ್ಥೆ, ಅದರ ಸದಸ್ಯರ ಮೇಲೆ ಮತ್ತು ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಂದು ತರಗತಿಗಳು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದ ನೂರಾರು ವಿದ್ಯಾರ್ಥಿಗಳು ಅಂಬೇಡ್ಕರ್‌ಗೆ ಅವಮಾನ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವವಿದ್ಯಾಲಯದ ಕುಲಪತಿಗಳ ಮೂಲಕ ರಾಷ್ಟ್ರಪತಿ, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಇದೇ ವೇಳೆ ಪೊಲೀಸ್ ಠಾಣೆಗೆ ತೆರಳಿ ತಪ್ಪಿತಸ್ಥರ ಮೇಲೆ ಜಾತಿನಿಂದನೆ ಅಡಿಯಲ್ಲಿ ಕೇಸು ದಾಖಲಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಗುರುಮೂರ್ತಿ, ಸಿಎಂಸಿಎಯು ಸಮಾಜದಲ್ಲಿ ಕೋಮು ಸೌಹಾರ್ದತೆ, ಶಾಂತಿಭಂಗ ಹಾಗೂ ಕಾನೂನು ಸುವ್ಯವಸ್ಥೆಗೆ ತೊಂದರೆ ಉಂಟಾಗಲು ಅಮಾನವೀಯ ಕೃತ್ಯವನ್ನು ಎಸಗಿದ್ದಾರೆ. ಅಂಬೇಡ್ಕರ್‌ರ ಗೌರವ ಮತ್ತು ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡಿದ್ದಾರೆ ಎಂದು ಆಪಾದಿಸಿದರು.

ಸಂವಿಧಾನ ಕರಡು ರಚಿಸುವ ಸಂಪೂರ್ಣ ಜವಾಬ್ದಾರಿ ಅಂಬೇಡ್ಕರ್‌ರ ಮೇಲೆ ಇತ್ತು. ಆ ಕಾರ್ಯವನ್ನು ಅವರು ಒಂಟಿಯಾಗಿಯೇ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಆದರೆ, ಇಂದು ಅವರ ವಿಚಾರಗಳನ್ನೇ ದಿಕ್ಕು ತಪ್ಪಿಸುವ ಕೆಲಸ ಮಾಡಲು ಮುಂದಾಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಶೋಷಿತ ಸಮುದಾಯಗಳ ಧ್ವನಿಯಾಗಿರುವ ಅಂಬೇಡ್ಕರ್‌ರ ಬಗ್ಗೆ ವ್ಯವಸ್ಥಿತವಾಗಿ ತಿರುಚಿದ ಇತಿಹಾಸವನ್ನು ತುಂಬಲು ಮುಂದಾದವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಕೂಡಲೇ ಮುಖ್ಯಮಂತ್ರಿ ಹಾಗೂ ಸಚಿವರು ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ವಿ.ಎಸ್.ವೆಂಕಟಾಚಲ, ಚಂದ್ರು, ಉಪಾಧ್ಯಕ್ಷ ವಿ.ಸತೀಶ್, ಮುಖಂಡರಾದ ಲೋಕೇಶ್, ನವೀನ್, ದೀಪಕ್, ಮಹೇಶ್, ಕಿರಣ್, ಗೋಪಾಲ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News