ಸರಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ: ಹೈಕೋರ್ಟ್ ಎಚ್ಚರಿಕೆ

Update: 2019-11-18 18:44 GMT

ಬೆಂಗಳೂರು, ನ.18: ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ನಿವಾರಿಸುವ ವಿಚಾರದಲ್ಲಿ ನ್ಯಾ.ಎನ್.ಕೆ.ಪಾಟೀಲ್ ನೇತೃತ್ವದ ಸಮಿತಿಯ ಶಿಫಾರಸುಗಳ ಅನುಪಾಲನೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯ ಸರಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸುವುದಾಗಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. 

ಈ ಕುರಿತು ಬೆಳಗಾವಿ ಜಿಲ್ಲೆಯ ಅಥಣಿಯ ವಿಮೋಚನಾ ಸಂಸ್ಥೆಯ ಬಿ.ಎಲ್. ಪಾಟೀಲ್ ಅವರು 2011ರಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಬರೆದ ಪತ್ರ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಸರಕಾರದ ಪರ ವಾದಿಸಿದ ವಕೀಲರು, ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಯ ಅನುಪಾಲನಾ ವರದಿ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ಇದರಿಂದ ಅಸಮಧಾನಗೊಂಡ ನ್ಯಾಯಪೀಠವು ಮಕ್ಕಳಲ್ಲಿನ ಅಪೌಷ್ಠಿಕತೆಯ ಪ್ರಮಾಣ ರಾಜ್ಯದಲ್ಲಿ ಹೆಚ್ಚುತ್ತಿದೆ. ಸರಕಾರ ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ ಎಂದು ಸರಕಾರಕ್ಕೆ ಸೂಚನೆ ನೀಡಿತು.

ನ್ಯಾ.ಎನ್.ಕೆ.ಪಾಟೀಲ್ ನೇತೃತ್ವದ ತಜ್ಞರ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ವರದಿ ಸಲ್ಲಿಸಲು ನೀಡಿದ್ದ ನಿರ್ದೇಶನ ಹಾಗೂ ಈ ನಿಟ್ಟಿನಲ್ಲಿ ಆದೇಶ, ನಿರ್ದೇಶನಗಳನ್ನು ಪಾಲಿಸದ ಅನುಪಾಲನಾ ವರದಿ ಸಲ್ಲಿಸಲು ನೀಡಲಾಗಿದ್ದ ಆದೇಶ ಪಾಲಿಸಿದ್ದರ ಬಗ್ಗೆ ವಿವರಣೆ ನೀಡಲು ಸೂಚಿಸಿತು. ಈ ವಿವರಣೆ ಆಧಾರಿಸಿ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸುವುದಾಗಿ ತಿಳಿಸಿ, ವಿಚಾರಣೆಯನ್ನು ನ.20ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News