ಉಪಚುನಾವಣೆ ಬಳಿಕ ಜೆಡಿಎಸ್‌ಗೆ ವಿಳಾಸವೇ ಇರುವುದಿಲ್ಲ: ರೇಣುಕಾಚಾರ್ಯ

Update: 2019-11-20 12:05 GMT

ಬೆಂಗಳೂರು, ನ. 20: ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಶಕ್ತಿ ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಯಾರಿಗೂ ಇಲ್ಲ. ಚುನಾವಣೆ ಬಳಿಕ ಜೆಡಿಎಸ್ ಪಕ್ಷಕ್ಕೆ ವಿಳಾಸವೇ ಇರುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಟೀಕಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹದಿನೈದು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಅಥವಾ ಗೆಲ್ಲಿಸುವ ಶಕ್ತಿ ಇರುವುದು ಮತದಾರರಿಗೆ ಹೊರತು ಎಚ್‌ಡಿಕೆಗೆ ಅಲ್ಲ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ಸಿಎಂ ಸ್ಥಾನ ಕಳೆದುಕೊಂಡು ಹತಾಶೆಯಿಂದ ಗೊಂದಲಕರ ಹೇಳಿಕೆ ನೀಡುತ್ತಿದ್ದಾರೆ. ಬಿಎಸ್‌ವೈ ಸರಕಾರ ಬೀಳಲು ಬಿಡುವುದಿಲ್ಲ ಎಂದು ಒಮ್ಮೆ ಹೇಳಿದ್ದರು. ಮತ್ತೊಮ್ಮೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದೇ ನಮ್ಮ ಗುರಿ ಎಂದು ಗೊಂದಲ ಸೃಷ್ಟಿಸುತ್ತಿದ್ದಾರೆಂದು ಟೀಕಿಸಿದರು.

ಕಾಂಗ್ರೆಸ್‌ನಿಂದ ಬಿಜೆಪಿಗೆ ಬರಲು ಹಲವು ಮುಖಂಡರು ತುದಿಗಾಲಲ್ಲಿ ನಿಂತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಇಲ್ಲದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ಜೆಡಿಎಸ್-ಕಾಂಗ್ರೆಸ್ ಪಕ್ಷದ ಆಂತರಿಕ ಅಸಮಾಧಾನದಿಂದ ಮತ್ತು ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ 17 ಮಂದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದರು.

ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಉಪಚುನಾವಣೆ ಎದುರಿಸುತ್ತಿದ್ದೇವೆ. ನಮ್ಮಲ್ಲಿ ಮೂಲ, ವಲಸಿಗ ಎಂಬ ಭೇದವಿಲ್ಲ. ಹದಿನೈದು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವುದು ಸೂರ್ಯ, ಚಂದ್ರರಷ್ಟೇ ಸತ್ಯ ಎಂದು ರೇಣುಕಾಚಾರ್ಯ ನುಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಭ್ರಮೆಯಲ್ಲಿದ್ದು, ಹಗಲುಗನಸು ಕಾಣುತ್ತಿದ್ದಾರೆ. ಅದು ನನಸಾಗಲು ಸಾಧ್ಯವಿಲ್ಲ. ಕಾಂಗ್ರೆಸ್‌ನಲ್ಲಿ ಈಗಾಗಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿದ್ದು, ಹಿರಿಯ ಕಾಂಗ್ರೆಸಿಗರು ಸಿದ್ದು ವಿರುದ್ಧ ತಿರುಗಿ ಬಿದ್ದಿದ್ದಾರೆಂದು ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News