ಕಲ್ಬುಗಿ, ಗೌರಿ ಹತ್ಯೆ ಪ್ರಕರಣಗಳ ಬಗ್ಗೆ ಸಿಎಂ ಗಮನಹರಿಸಲಿ: ದಿನೇಶ್ ಗುಂಡೂರಾವ್

Update: 2019-11-21 13:57 GMT

ಬೆಂಗಳೂರು, ನ. 21: ಮಾಜಿ ಸಚಿವ ಹಾಗೂ ಹಾಲಿ ಶಾಸಕ ತನ್ವೀರ್ ಸೇಠ್ ಕೊಲೆಯತ್ನ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಂಶೋಧಕ ಎಂ.ಎಂ. ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಗ್ಗೆ ಸಿಎಂ ಗಮನಹರಿಸಲಿ ಎಂದು ಒತ್ತಾಯಿಸಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ವೀರ್ ಸೇಠ್ ಹತ್ಯೆ ಪ್ರಕರಣದ ಹಿಂದೆ ಯಾವುದೇ ವ್ಯಕ್ತಿ ಅಥವಾ ಸಂಘಟನೆ ಇದ್ದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ, ಈ ವಿಚಾರದಲ್ಲಿ ರಾಜಕೀಯ ಸರಿಯಲ್ಲ ಎಂದು ಆಕ್ಷೇಪಿಸಿದರು.

ಸೇಠ್ ಕೊಲೆಯತ್ನ ಪ್ರಕರಣಕ್ಕೆ ಎಸ್‌ಡಿಪಿಐ ಹಾಗೂ ಪಿಎಫ್‌ಐ ವಿರುದ್ಧದ ಪ್ರಕರಣ ಹಿಂಪಡೆದಿರುವುದೇ ಕಾರಣ ಎಂದು ಸಿಎಂ ಬಿಎಸ್‌ವೈ ಹೇಳಿಕೆ ಸಲ್ಲ ಎಂದ ದಿನೇಶ್ ಗುಂಡೂರಾವ್, ತನ್ವೀರ್ ಸೇಠ್ ಕೊಲೆಯತ್ನ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅದು ಬಿಟ್ಟು ಉಪಚುನಾವಣೆ ಸಂದರ್ಭದಲ್ಲಿ ರಾಜಕೀಯ ಹೇಳಿಕೆ ಸರಿಯಲ್ಲ ಎಂದು ಟೀಕಿಸಿದರು.

ಕ್ಷಮೆ ಕೇಳಬೇಕು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ಪಾತ್ರವಿಲ್ಲ ಎಂದು ಸಿಬಿಐ ತನ್ನ ತನಿಖಾ ವರದಿಯಲ್ಲಿ ಸ್ಪಷ್ಪಪಡಿಸಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಕೂಡಲೇ ರಾಜ್ಯದ ಜನತೆ ಕ್ಷಮೆ ಕೋರಬೇಕು ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದರು.

ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ಕೈವಾಡವಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದಲ್ಲದೆ, ಅವರ ರಾಜೀನಾಮೆಗೂ ಒತ್ತಾಯಿಸಿತ್ತು. ಹೀಗಾಗಿ ಜಾರ್ಜ್ ಅಂದು ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಪ್ರಕರಣ ಸಿಬಿಐಗೆ ವಹಿಸಲಾಗಿತ್ತು. ಇದೀಗ ಸಿಬಿಐ ಸತ್ಯಾಂಶ ಬಹಿರಂಗಪಡಿಸಿದೆ ಎಂದರು.

ಬಿಜೆಪಿ ರಾಜ್ಯದ ಜನತೆಗೆ ತಪ್ಪು ಮಾಹಿತಿ ನೀಡಿದ್ದು ಅಲ್ಲದೆ, ಅಂದು ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರಿಗೆ ಮಾನಸಿಕ ಹಿಂಸೆ ನೀಡಿತ್ತು. ಅಲ್ಲದೆ, ಅವರಿಗೆ ತೀವ್ರ ನೋವು ಮಾಡಿತ್ತು. ಹೀಗಾಗಿ ಬಿಜೆಪಿ ಕೂಡಲೇ ಜಾರ್ಜ್ ಮತ್ತು ಜನತೆ ಕ್ಷಮೆ ಕೇಳಬೇಕು ಎಂದು ಒತ್ತಾಯ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News