ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರ ಧರಣಿ

Update: 2019-11-22 17:58 GMT

ಮಂಡ್ಯ, ನ.22: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಕರ್ತರು ಯುವ ನಾಯಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಧರಣಿ ನಿರತರು, ಕೂಡಲೇ ರೈತರ ಸಮಸ್ಯೆಗಳನ್ನು ಈಡೇರಿಸಲು ಕ್ರಮವಹಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಭತ್ತ ಕಟಾವಿಗೆ ಬರುತ್ತಿದ್ದು, ತಕ್ಷಣ ಬೆಂಬಲ ಬೆಲೆ ಘೋಷಿಸಿ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಖಾರ್ಯ ಆಗಿ ಭತ್ತ ಖರೀದಿ ಕೇಂದ್ರ ತೆರೆಯಬೇಕು ಎಂದು ಅವರು ಒತ್ತಾಯಿಸಿದರು.

ಈಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬನ್ನು ಸಾಗಾಣೆ ವೆಚ್ಚ ಭರಿಸಿ ಬೇರೆ ಬೇರೆ ಕಾರ್ಖಾನೆಗಳಿಗೆ ಸರಬರಾಜು ಮಾಡಬೇಕು. ಮೈಷುಗರ್ ಮತ್ತು ಪಿಎಸ್‍ಎಸ್‍ಕೆ ಕಾರ್ಖಾನೆಗಳನ್ನು ಮುಂದಿನ ಹಂಗಾಮಿನಲ್ಲಿ ಪ್ರಾರಂಭಿಸಬೇಕು ಎಂದು ಅವರು ಆಗ್ರಹಿಸಿದರು.

ಕೆಆರ್‍ಎಸ್ ಜಲಾಶಯ ಸುತ್ತ 20 ಕಿ.ಮೀ. ವ್ಯಾಪ್ತಿ ಪ್ರದೇಶದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಬೇಕು. ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ತಾಕೀತು ಮಾಡಿದರು.

ರೈತರ ಇತರೆ ಬೇಡಿಕೆಗಳನ್ನೂ ಈಡೇರಿಸುವಂತೆ ಆಗ್ರಹಿಸಿದ ಅವರು, ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಯರಗನಹಳ್ಳಿ ರಾಮಕೃಷ್ಣಯ್ಯ, ಶಂಭೂನಹಳ್ಳಿ ಸುರೇಶ್, ಲತಾ ಶಂಕರ್, ಜಿ.ಎ.ಶಂಕರ್, ಎಂ.ವಿ.ರಾಜೇಗೌಡ, ನಾಗರಾಜು ಹೊಳಲು, ಜಿ.ಎಸ್. ಲಿಂಗಪ್ಪಾಜಿ, ಶಿವಳ್ಳಿ ಚಂದ್ರು, ಬಿ.ಬೊಮ್ಮೇಗೌಡ, ಇತರೆ ಮುಖಂಡರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News