ಮಹಿಳೆಯರು, ಮಕ್ಕಳ ಕಲ್ಯಾಣಕ್ಕೆ ಸರಕಾರಿ ಯೋಜನೆಗಳ ಸಮಪರ್ಕ ಜಾರಿ ಅತ್ಯಗತ್ಯ

Update: 2019-11-22 18:27 GMT

ಚಿಕ್ಕಮಗಳೂರು, ನ.22: ಸರಕಾರಗಳು ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತೆರೆಯುವುದರೊಂದಿಗೆ ಅವರ ಕಲ್ಯಾಣ ಮತ್ತು ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಮಕ್ಕಳ ಮೇಲಿನ ದೌರ್ಜನ್ಯಗಳ ತಡೆಗೆ ಈ ಇಲಾಖೆ ಮೂಲಕ ಅನೇಕ ಕಾನೂನುಗಳನ್ನೂ ರೂಪಿಸಿದೆ. ಇವುಗಳನ್ನು ಅವರಿಗೆ ತಲುಪಿಸುವ ಕೆಲಸ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳದ್ದಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್.ಕುಂದೂರ್ ಹೇಳಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಯಲು ಸರ್ಕಾರ ಅನೇಕ ಯೋಜನೆಗಳು ಮತ್ತು ಕಾನೂನುಗಳನ್ನು ಜಾರಿಗೆ ತಂದಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಸಮಾಜದಲ್ಲಿ ಅವರು ಉತ್ತಮ ರೀತಿಯಲ್ಲಿ ಬದುಕಲು ಅನುವು ಮಾಡಿಕೊಡಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಅಧಿಕಾರಿಗಳ ಗಮನಕ್ಕೆ ಬಾರದೆ ಬಾಲ್ಯವಿವಾಹಗಳು ಆಗುತ್ತಿರುವುದು ಕೇಳಿ ಬರುತ್ತಿದೆ. ಸಮಾಜದಲ್ಲಿ ಅನಿಷ್ಟ ಪದ್ಧತಿಯಾಗಿರುವ ಈ ಸಾಮಾಜಿಕ ಪಿಡುಗನ್ನು ಸಂಪೂರ್ಣವಾಗಿ ತೊಡೆದುಹಾಕಲು ಅಧಿಕಾರಿಗಳು ಕಾನೂನಿನ ಮೂಲಕ ಮುಂದಾಗಬೇಕು ಎಂದ ಅವರು, ತೆಲಂಗಾಣ ರಾಜ್ಯದಲ್ಲಿ ಈ ಪದ್ಧತಿಯನ್ನು ತಡೆಯಲು ವಿಶೇಷ ನಿಯಮ ಜಾರಿ ಮಾಡಲಾಗಿದೆ. ಅದನ್ನು ಎಲ್ಲೆಡೆ ಜಾರಿಗೆ ತರಬೇಕು. ಇಂತಹ ಸಾಮಾಜಿಕ ಪಿಡುಗುಗಳ ತಡೆಗೆ ಜಾರಿಯಲ್ಲಿರುವ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದರು.

ಪ್ರಸಕ್ತ ದಿನಗಳಲ್ಲಿ ದಿನೇ ದಿನೇ ಸೈಬರ್ ಕ್ರೈಂಗಳು ಹೆಚ್ಚಾಗುತ್ತಿವೆ. ಮಕ್ಕಳು ಮೊಬೈಲ್‍ಗಳನ್ನು ಬಳಸಲು ಪೋಷಕರು ಅನುವು ಮಾಡಿಕೊಡಬಾರದು. ಮೊಬೈಲ್ ಬಳಕೆಯಿಂದ ಮಕ್ಕಳು ಮಾನಸಿಕವಾಗಿ ಮತ್ತು ಶಾರೀರಕವಾಗಿ ಹಾಳಾಗುತ್ತಾರೆ. ಈ ಬಗ್ಗೆ ವಿಶೇಷ ಕಾಳಜಿ ತೆಗೆದುಕೊಳ್ಳಬೇಕೆಂದ ಅವರು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಆಗಿಂದಾಗ್ಗೆ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆ ಗಮನಿಸುವ ಜೊತೆಗೆ ಅವರಲ್ಲಿ ಮೊಬೈಲ್‍ನಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಬೇಕು.

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಾಂತ್ವನ ಹೇಳುವುದರ ಜೊತೆಗೆ ಅವರಿಗೆ ಆರ್ಥಿಕ ನೆರವು ಒದಗಿಸಬೇಕು. ಸಂತ್ರಸ್ತರಿಗೆ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಅಲ್ಲದೇ ಕಾನೂನಿನ ನೆರವನ್ನು ಸಹ ಒದಗಿಸಬೇಕು. ಸೂಕ್ತ ಪರಿಹಾರವನ್ನೂ ನೀಡಬೇಕೆಂದ ಅವರು, ಪ್ಲಾಂಟೇಶನ್ ಕೂಲಿ ಕಾರ್ಮಿಕ ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳು ಅರಿವು ಮೂಡಿಸಬೇಕು. ಅಲ್ಲದೇ ಅವರ ಮೇಲೆ ಶೋಷಣೆಗಳಾಗುತ್ತಿರುವ ಬಗ್ಗೆ ದೂರುಗಳಿದ್ದು, ಈ ಸಂಬಂಧ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಬೇಕೆಂದು ಇದೇ ವೇಳೆ ಸೂಚನೆ ನೀಡಿದರು. 

ಜಿಲ್ಲೆಯಲ್ಲಿ 1,43,993 ವಿದ್ಯಾರ್ಥಿಗಳಿದ್ದು, ಅವರಲ್ಲಿ 70,117 ಹೆಣ್ಣು ಮಕ್ಕಳಿದ್ದಾರೆ. ಈ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ಇದೇ ವೇಳೆ ಶ್ಯಾಮಲಾ ಕುಂದೂರ್ ಸೂಚಿಸಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಮಾತನಾಡಿ, ಮೂಡಿಗೆರೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಾಂತ್ವನ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅನುವು ಮಾಡಿಕೊಡಬೇಕು ಎಂದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂದಿಸಿದಂತೆ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಅಥವಾ ಸಿಬ್ಬಂದಿ ಕೊರತೆಯಿದ್ದಲ್ಲಿ ತಮ್ಮ ಗಮನಕ್ಕೆ ತಂದಲ್ಲಿ ಅದನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಾಜಗೋಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೈ.ಬಿ.ಸುಂದರೇಶ್, ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News